
ಬಾಗಲಕೋಟೆ , 27 ನವೆಂಬರ್ (ಹಿ.ಸ.)
ನಗರದ ವಿದ್ಯಾಗಿರಿ ಪ್ರದೇಶದ ಹೊಸ ಬಿಪ್ಸ್ ಶಾಲೆಯ ಪಕ್ಕದಲ್ಲಿರುವ, ನಿಡಗುಂದಿ ಪೆಟ್ರೋಲ್ ಪಂಪ್ನಿಂದ ಮಹಾರಾಜ ಗಾರ್ಡನ್ಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಕಳೆದ ಹಲವು ದಿನಗಳಿಂದ ಕುಡಿಯುವ ನೀರಿನ ಪೈಪ್ಲೈನ್ನಿಂದ ನಿರಂತರವಾಗಿ ನೀರು ಸೋರಿಕೆಯಾಗುತ್ತಿದೆ.
ಪೈಪ್ಲೈನ್ನಿಂದ ಸೋರಿಕೆಯಾಗುತ್ತಿರುವ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ವಾಹನ ಸವಾರರು ಹಾಗೂ ಪಾದಚಾರಿಗಳು ಸಮಸ್ಯೆ ಎದುರಿಸುವಂತಾಗಿದೆ. ಮತ್ತೊಂದೆಡೆ, ಕುಡಿಯುವ ನೀರು ನಿರಂತರವಾಗಿ ರಸ್ತೆಯಲ್ಲಿ ಹರಿದು ವ್ಯರ್ಥವಾಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಈವರೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬ ಅಸಮಾಧಾನ ಸ್ಥಳೀಯರಿಂದ ವ್ಯಕ್ತವಾಗಿದೆ.
ಒಂದೆಡೆ ಬೇಸಿಗೆ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ಇರುವಾಗ, ಮತ್ತೊಂದೆಡೆ ಪೈಪ್ಲೈನ್ ಸೋರಿಕೆಯಿಂದ ಅಮೂಲ್ಯವಾದ ನೀರು ವ್ಯರ್ಥವಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ.
ಈ ಕುರಿತು ಮಾತನಾಡಿದ ಸ್ಥಳೀಯ ನಿವಾಸಿ ಪ್ರಮೋದ ಓಲೇಕಾರ್, ಕಳೆದ ಹಲವು ದಿನಗಳಿಂದ ರಸ್ತೆಯಲ್ಲಿ ನೀರು ನಿರಂತರವಾಗಿ ಹರಿಯುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಪರಿಹರಿಸಲು ಮುಂದಾಗಿಲ್ಲ. ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪೈಪ್ಲೈನ್ ಸೋರಿಕೆಯನ್ನು ಪರಿಶೀಲಿಸಬೇಕು. ಕೇವಲ ತಾತ್ಕಾಲಿಕ ದುರಸ್ತಿ ಕಾರ್ಯಕ್ಕೆ ಸೀಮಿತವಾಗದೆ, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಸಂಬಂಧಪಟ್ಟ ನಗರಾಡಳಿತ ಹಾಗೂ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ತಕ್ಷಣ ಸ್ಪಂದಿಸಿ ನೀರಿನ ಸೋರಿಕೆ ತಡೆಗಟ್ಟಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande