
ನವದೆಹಲಿ, 27 ನವೆಂಬರ್ (ಹಿ.ಸ.):
ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಚಾರದಲ್ಲಿ ಕರ್ನಾಟಕದ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ನಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ.
ಪ್ರಕರಣದ ವಿಚಾರಣೆ ಮುಂದೂಡುವಂತೆ ತಮಿಳುನಾಡು ಸರ್ಕಾರದ ಪರ ವಕೀಲರು ಮನವಿ ಮಾಡಿದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಹಿರಿಯ ವಕೀಲರು ಲಭ್ಯವಿಲ್ಲ ಎಂಬ ಕಾರಣ ನೀಡಿ ತಮಿಳುನಾಡು ಪರ ವಕೀಲರು ವಿಚಾರಣೆಯನ್ನು ಮುಂದೂಡುವಂತೆ ಮನವಿ ಮಾಡಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಪೀಠ, ಹಿಂದಿನ ವಿಚಾರಣೆಯ ಸಂದರ್ಭದಲ್ಲೂ ಇದೇ ಕಾರಣ ನೀಡಿ ಮುಂದೂಡಿಕೆ ಕೋರಲಾಗಿತ್ತು ಎಂದು ನೆನಪಿಸಿದೆ.
ಪದೇಪದೇ ಇದೇ ರೀತಿ ಮುಂದೂಡಿಕೆ ಕೇಳುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಮೇಕೆದಾಟು ಪ್ರಕರಣ ಬಹುತೇಕ ಮುಗಿದುಹೋಗಿದೆ ಎಂದು ಹೇಳಿದೆ.
ಇಂತಹ ಅರ್ಜಿಗಳು ನ್ಯಾಯಾಲಯದಲ್ಲಿ ಈಗಾಗಲೇ ಬಾಕಿ ಇರುವ ಪ್ರಕರಣಗಳ ಸಂಖ್ಯೆಯನ್ನು ಹೆಚ್ಚಿಸುತ್ತವೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಬಳಿಕ ಪ್ರಕರಣದ ಮುಂದಿನ ವಿಚಾರಣೆಯನ್ನು ಫೆಬ್ರವರಿ 15ಕ್ಕೆ ಮುಂದೂಡಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R