
ಬಾಗಲಕೋಟ , 28 ನವೆಂಬರ್ (ಹಿ.ಸ.)
ಅಂತಾರಾಷ್ಟ್ರೀಯ ಬಾಲ್ಯವಿವಾಹ, ಬಾಲ್ಯ ಹಾಗೂ ಬಲವಂತದ ವಿವಾಹ ನಿರ್ಮೂಲನಾ ದಿನದ ಅಂಗವಾಗಿ ನವನಗರದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿಯುತ ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಪಿ. ಗೋಯಲ್ ಅವರು ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಬಾಲ್ಯವಿವಾಹದ ದುಷ್ಪರಿಣಾಮಗಳು, ಮಕ್ಕಳ ಹಕ್ಕುಗಳು ಹಾಗೂ ಬಲವಂತದ ವಿವಾಹದಿಂದ ಉಂಟಾಗುವ ಸಾಮಾಜಿಕ ಸಮಸ್ಯೆಗಳ ಕುರಿತು ಅರಿವು ಮೂಡಿಸಿದರು.
ಬಾಲ್ಯವಿವಾಹವು ಮಕ್ಕಳ ಶಿಕ್ಷಣ, ಆರೋಗ್ಯ, ಭವಿಷ್ಯ ಹಾಗೂ ವೈಯಕ್ತಿಕ ಬೆಳವಣಿಗೆಯ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಪ್ರತಿಯೊಂದು ಮಗುವಿಗೂ ಶಿಕ್ಷಣ ಪಡೆಯುವ, ಸ್ವತಂತ್ರವಾಗಿ ಬೆಳೆಯುವ ಹಾಗೂ ಗೌರವಯುತ ಜೀವನ ನಡೆಸುವ ಹಕ್ಕಿದೆ. ಬಾಲ್ಯವಿವಾಹ ಮತ್ತು ಬಲವಂತದ ವಿವಾಹಗಳನ್ನು ತಡೆಗಟ್ಟುವಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಸಮಾಜದ ಪ್ರತಿಯೊಬ್ಬರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಲಾಯಿತು.
ಮಕ್ಕಳ ಹಕ್ಕುಗಳ ರಕ್ಷಣೆ, ಕಾನೂನಿನ ಅರಿವು ಹಾಗೂ ಬಾಲ್ಯವಿವಾಹ ಮುಕ್ತ ಸಮಾಜ ನಿರ್ಮಾಣದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ಇಂತಹ ಅನಿಷ್ಟ ಪದ್ಧತಿಗಳು ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರುವಂತೆ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯಸ್ಥರು, ಶಿಕ್ಷಕರು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು ಎಂದು ಎಸ್ಪಿ ಗೋಯಲ್ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande