ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣ ರಾಜ್ಯಗಳಿಗೆ ಅನ್ಯಾಯ: ಡಿಕೆ ಶಿವಕುಮಾರ್
ನಾಳೆ ದೆಹಲಿಯಲ್ಲಿ ಕೇರಳ, ತೆಲಂಗಾಣ ಸಿಎಂಗಳ ಜೊತೆ ಸಭೆ; ದಕ್ಷಿಣ ರಾಜ್ಯಗಳ ಪ್ರಾತಿನಿಧ್ಯದ ಬಗ್ಗೆ ಚರ್ಚೆ
DK-Shivakumar-to-meet-Kerala-Telangana-CMs-over-delimitation


ಬೆಂಗಳೂರು, 28 ನವೆಂಬರ್ (ಹಿ.ಸ.):

ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಪ್ರಸ್ತಾವನೆಯಿಂದ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಚರ್ಚಿಸಲು ನಾಳೆ ದೆಹಲಿಯಲ್ಲಿ ಕೇರಳ ಮತ್ತು ತೆಲಂಗಾಣ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ರಾತ್ರಿ ದೆಹಲಿಗೆ ತೆರಳುತ್ತಿದ್ದು, ನಾಳೆ ಕೇರಳ ಮತ್ತು ತೆಲಂಗಾಣ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮಹಿಳಾ ಮೀಸಲಾತಿ ಮಸೂದೆ ಕುರಿತು ಚರ್ಚಿಸಲಾಗುವುದು ಎಂದರು.

ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರಗಳ ಪುನರ್ವಿಂಗಡಣೆ ನಡೆದರೆ ದಕ್ಷಿಣ ಭಾರತದ ರಾಜ್ಯಗಳ ಸಂಸತ್ತಿನ ಪ್ರಾತಿನಿಧ್ಯ ಮತ್ತು ರಾಜಕೀಯ ಬಲದ ಮೇಲೆ ಪರಿಣಾಮ ಉಂಟಾಗಬಹುದು. ಹೀಗಾಗಿ ದಕ್ಷಿಣ ರಾಜ್ಯಗಳ ಹಿತಾಸಕ್ತಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಚರ್ಚೆ ನಡೆಸಬೇಕಿದೆ ಎಂದು ಹೇಳಿದರು.

ಮಹಿಳೆಯರಿಗೆ ಶೇ.33ರಷ್ಟು ರಾಜಕೀಯ ಮೀಸಲಾತಿ ನೀಡುವ ವಿಚಾರಕ್ಕೆ ನಮ್ಮ ಬೆಂಬಲವಿದೆ. ಎಲ್ಲ ರಾಜಕೀಯ ಪಕ್ಷಗಳೂ ಮಹಿಳಾ ಮೀಸಲಾತಿಯನ್ನು ಬೆಂಬಲಿಸಿವೆ. ಆದರೆ ಲೋಕಸಭೆ ಮತ್ತು ವಿಧಾನಸಭೆಗಳ ಸದಸ್ಯ ಬಲವನ್ನು ಶೇ.50ರಷ್ಟು ಹೆಚ್ಚಿಸುವ ಕೇಂದ್ರ ಸರ್ಕಾರದ ಪ್ರಸ್ತಾವನೆ ಕುರಿತು ನಮ್ಮ ಪಕ್ಷದ ನಿಲುವನ್ನು ನಾಳಿನ ಸಭೆಯ ಬಳಿಕ ಸ್ಪಷ್ಟಪಡಿಸಲಾಗುವುದು ಎಂದರು.

ಕೇಂದ್ರ ಸಚಿವ ಸಂಪುಟವು ಕ್ಷೇತ್ರಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ಸದ್ಯ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಮಾಹಿತಿಯಷ್ಟೇ ನಮಗೆ ತಿಳಿದಿದೆ. ಪ್ರಸ್ತಾವನೆಯ ಸಾಧಕ-ಬಾಧಕಗಳು ಹಾಗೂ ದಕ್ಷಿಣ ರಾಜ್ಯಗಳ ಮೇಲಾಗುವ ಪರಿಣಾಮಗಳನ್ನು ಪರಿಶೀಲಿಸಿದ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು.

ಬಿಜೆಪಿ ದೇಶಾದ್ಯಂತ ತನಗೆ ಅನುಕೂಲವಾಗುವ ರೀತಿಯಲ್ಲಿ ಯೋಚಿಸುತ್ತಿದೆ ಎಂದು ಆರೋಪಿಸಿದ ಅವರು, ದಕ್ಷಿಣ ಭಾರತದ ರಾಜ್ಯಗಳ ಹಿತಾಸಕ್ತಿ ಮತ್ತು ಸಂಸತ್ತಿನಲ್ಲಿನ ಪ್ರಾತಿನಿಧ್ಯಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುವುದು ಅಗತ್ಯವಾಗಿದೆ. ಈ ಎಲ್ಲ ವಿಚಾರಗಳನ್ನು ಒಟ್ಟಾಗಿ ಚರ್ಚಿಸುತ್ತೇವೆ ಎಂದರು.

ಕ್ಷೇತ್ರ ಪುನರ್ವಿಂಗಡಣೆ ಕುರಿತು ಚರ್ಚಿಸಲು ಡಿಎಂಕೆ ಆಯೋಜಿಸಿದ್ದ ಚೆನ್ನೈ ಸಭೆಯಲ್ಲೂ ಭಾಗವಹಿಸಿದ್ದೆ. ಈ ವಿಚಾರವಾಗಿ ಕಾಂಗ್ರೆಸ್ ಕೂಡ ವಿವಿಧ ರಾಜಕೀಯ ಪಕ್ಷಗಳ ನಾಯಕರಿಗೆ ದೆಹಲಿಯಲ್ಲಿ ಚರ್ಚೆ ನಡೆಸಲು ಆಹ್ವಾನ ನೀಡಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande