
ವಿಜಯಪುರ, 28 ನವೆಂಬರ್ (ಹಿ.ಸ.)
ವಿಜಯಪುರ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಸಾರ್ವಜನಿಕರು ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದ ಪ್ರಮುಖ ಜಲಮೂಲವಾದ ಭೂತನಾಳ ಕೆರೆಯ ನೀರಿನ ಮಟ್ಟ ಗಣನೀಯವಾಗಿ ಕುಸಿದಿರುವ ಹಿನ್ನೆಲೆಯಲ್ಲಿ ಆರು ವಾರ್ಡ್ಗಳಿಗೆ ಎಂಟು ದಿನಗಳಿಗೊಮ್ಮೆ ಮಾತ್ರ ನೀರು ಪೂರೈಸಲಾಗುತ್ತಿದೆ. ಇಂತಹ ಗಂಭೀರ ಸಂದರ್ಭದಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ನಗರ ಶಾಸಕರು ಕೇಂದ್ರ ಸ್ಥಾನದಲ್ಲಿದ್ದು ಸಮಸ್ಯೆ ಪರಿಹರಿಸುವ ಪ್ರಯತ್ನ ಮಾಡುತ್ತಿಲ್ಲ ಎಂದು ನಗರಸಭೆ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪರಶುರಾಮಸಿಂಗ್ ರಜಪೂತ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರ ನಗರದ 35 ವಾರ್ಡ್ಗಳ ಪೈಕಿ 29 ವಾರ್ಡ್ಗಳಿಗೆ ಕೃಷ್ಣಾ ನದಿಯಿಂದ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಉಳಿದ ಆರು ವಾರ್ಡ್ಗಳಿಗೆ ಭೂತನಾಳ ಕೆರೆಯಿಂದ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ ಕೆರೆಯಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿರುವುದರಿಂದ ಈ ಆರು ವಾರ್ಡ್ಗಳ ನಿವಾಸಿಗಳಿಗೆ ಎಂಟು ದಿನಗಳಿಗೊಮ್ಮೆ ಮಾತ್ರ ನೀರು ಪೂರೈಸುವ ಪರಿಸ್ಥಿತಿ ಎದುರಾಗಿದೆ ಎಂದು ತಿಳಿಸಿದ್ದಾರೆ.
ಮಳೆಗಾಲ ಆರಂಭವಾಗುವವರೆಗೂ ಇದೇ ವ್ಯವಸ್ಥೆ ಮುಂದುವರಿಯಲಿದೆ ಎಂದು ಜಲಮಂಡಳಿ ತಿಳಿಸಿರುವುದು ಈ ಭಾಗದ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಬೇಸಿಗೆಯ ಬಿಸಿಲಿನ ಪರಿಣಾಮ ನೀರಿನ ಬೇಡಿಕೆ ಹೆಚ್ಚಾಗಿದ್ದು, ಎಂಟು ದಿನಗಳಿಗೊಮ್ಮೆ ನೀರು ಪೂರೈಸುವುದರಿಂದ ಮನೆಮಂದಿ, ಮಹಿಳೆಯರು, ವೃದ್ಧರು ಹಾಗೂ ಮಕ್ಕಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಪರ್ಯಾಯ ನೀರು ಪೂರೈಕೆಗೆ ಟಾಸ್ಕ್ಫೋರ್ಸ್ ರಚಿಸಿ
ಕುಡಿಯುವ ನೀರು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದೆ. ನಗರದ ಜನರಿಗೆ ಸಮರ್ಪಕವಾಗಿ ನೀರು ಪೂರೈಸುವುದು ಆಡಳಿತ ವ್ಯವಸ್ಥೆಯ ಪ್ರಮುಖ ಜವಾಬ್ದಾರಿಯಾಗಿದೆ. ನೀರಿನ ಸಮಸ್ಯೆ ಎದುರಾಗುವ ಮುನ್ನವೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಪರ್ಯಾಯ ಜಲಮೂಲಗಳ ಮೂಲಕ ನೀರು ಪೂರೈಸುವ ವ್ಯವಸ್ಥೆ ರೂಪಿಸಬೇಕಿತ್ತು. ಈ ನಿಟ್ಟಿನಲ್ಲಿ ತಕ್ಷಣ ಟಾಸ್ಕ್ಫೋರ್ಸ್ ರಚಿಸಿ, ಪಾಲಿಕೆ ಹಾಗೂ ಜಲಮಂಡಳಿ ಅಧಿಕಾರಿಗಳ ನಡುವೆ ಸಮನ್ವಯ ಸಾಧಿಸಬೇಕಿದೆ ಎಂದು ಒತ್ತಾಯಿಸಿದ್ದಾರೆ.
ನೀರಿನ ಸಮಸ್ಯೆ ಪರಿಹಾರಕ್ಕಾಗಿ ಅಧಿಕಾರಿಗಳ ಸರಣಿ ಸಭೆಗಳನ್ನು ನಡೆಸಿ, ಪರ್ಯಾಯ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸಬೇಕಾದ ನಗರ ಶಾಸಕರು ಕಳೆದ ಎಂಟು ದಿನಗಳಿಂದ ಕಾಣಿಸುತ್ತಿಲ್ಲ. ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವಾಗ ಹಾಗೂ ಸ್ಮಾರ್ಟ್ ಸಿಟಿ ಅಭಿವೃದ್ಧಿಯ ಕುರಿತು ಮಾತನಾಡುವ ಶಾಸಕರು, ಇದೀಗ ಜನರು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಮೌನವಾಗಿರುವುದು ಸರಿಯಲ್ಲ ಎಂದು ರಜಪೂತ ಟೀಕಿಸಿದ್ದಾರೆ.
ಜನರ ಸಮಸ್ಯೆ ಪರಿಹರಿಸುವುದು ಶಾಸಕರ ಆದ್ಯ ಕರ್ತವ್ಯ
ಇದೀಗ ಕೇವಲ ಹೇಳಿಕೆಗಳನ್ನು ನೀಡುತ್ತಾ ಕಾಲಹರಣ ಮಾಡುವ ಸಮಯವಲ್ಲ. ಜನರಿಗೆ ಕುಡಿಯುವ ನೀರು ಪೂರೈಸಲು ತುರ್ತು ಕ್ರಮ ಕೈಗೊಳ್ಳುವ ಅಗತ್ಯವಿದೆ. ನಗರ ಶಾಸಕರು ತಕ್ಷಣ ಕೇಂದ್ರ ಸ್ಥಾನಕ್ಕೆ ಆಗಮಿಸಿ, ಪಾಲಿಕೆ ಮತ್ತು ಜಲಮಂಡಳಿ ಅಧಿಕಾರಿಗಳೊಂದಿಗೆ ಸಮನ್ವಯ ಸಭೆ ನಡೆಸಬೇಕು. ನೀರಿನ ಲಭ್ಯತೆ, ಪರ್ಯಾಯ ಜಲಮೂಲಗಳು ಹಾಗೂ ಪೂರೈಕೆಯ ವೇಳಾಪಟ್ಟಿಯ ಕುರಿತು ಸಮಗ್ರ ಚರ್ಚೆ ನಡೆಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ನಗರವನ್ನು ಪ್ರತಿನಿಧಿಸುವ ಶಾಸಕರಿಗೆ ಜನರ ಮೂಲಭೂತ ಸಮಸ್ಯೆಗಳಿಗೆ ಸ್ಪಂದಿಸುವುದು ಆದ್ಯ ಕರ್ತವ್ಯವಾಗಿದೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿಯೂ ಜವಾಬ್ದಾರಿ ನಿರ್ವಹಿಸದಿದ್ದರೆ ಸಾರ್ವಜನಿಕರು ತಕ್ಕ ರೀತಿಯಲ್ಲಿ ಪ್ರತಿಕ್ರಿಯಿಸಲಿದ್ದಾರೆ ಎಂದು ಪರಶುರಾಮಸಿಂಗ್ ರಜಪೂತ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande