ಕ್ಷೇತ್ರ ಪುನರ್ವಿಂಗಡಣೆ ಅವೈಜ್ಞಾನಿಕ; ಕೇಂದ್ರ ಸರ್ಕಾರಕ್ಕೆ ಸೋಲಿನ ಭಯ: ಪ್ರಿಯಾಂಕ್ ಖರ್ಗೆ
ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಅವೈಜ್ಞಾನಿಕ ಎಂದು ಟೀಕಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎರಡು ಹಸು ನೀಡುವ ಎಚ್ಡಿಕೆ ಹೇಳಿಕೆಗೆ ವ್ಯಂಗ್ಯವಾಡಿದ್ದು, ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ಕೇಂದ್ರವೂ ಜವಾಬ್ದಾರಿಯಾಗಿದೆ ಎಂದಿದ್ದಾರೆ. ಬಿಜೆಪಿ ಪಾದಯಾತ್ರೆ
Priyank Kharge Slams Centre Over Delimitation Bill, Takes Dig at HD Kumaraswamy and BJP Leaders


ಕಲಬುರಗಿ, 28 ನವೆಂಬರ್ (ಹಿ.ಸ.):

ಕ್ಷೇತ್ರ ಪುನರ್ವಿಂಗಡಣೆ ಮಸೂದೆಯು ಸಂಪೂರ್ಣ ಅವೈಜ್ಞಾನಿಕವಾಗಿದೆ. ಈಗಾಗಲೇ ಲೋಕಸಭೆಯಲ್ಲಿ 545 ಸದಸ್ಯರಿದ್ದು, ಅವರಿಗೆ ಮಾತನಾಡಲು ಸಮರ್ಪಕ ಸಮಯ ಸಿಗುತ್ತಿಲ್ಲ.

ಇನ್ನು ಸದಸ್ಯರ ಸಂಖ್ಯೆಯನ್ನು ಹೆಚ್ಚಿಸುವುದರಿಂದ ಏನು ಪ್ರಯೋಜನ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ಕ್ಷೇತ್ರ ಪುನರ್ವಿಂಗಡಣೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈಗಾಗಲೇ ಉತ್ತರ ಭಾರತದ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯ ಸಂಸದರು ಇದ್ದಾರೆ. ಶೇ.50ರಷ್ಟು ಸದಸ್ಯರ ಸಂಖ್ಯೆಯನ್ನು ಹೆಚ್ಚಿಸುವ ಪ್ರಸ್ತಾಪದ ಹಿಂದೆ ಸ್ಪಷ್ಟ ಉದ್ದೇಶವಿದೆ ಎಂದು ಆರೋಪಿಸಿದರು.

ಎಸ್ಐಆರ್ ಪ್ರಕ್ರಿಯೆ ವಿಚಾರವಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧವೂ ಟೀಕಾಪ್ರಹಾರ ನಡೆಸಿದ ಅವರು, ಎಸ್ಐಆರ್ ಮೂಲಕ ಹಾಳು ಮಾಡಿದ ಜ್ಞಾನೇಶ್ ಕುಮಾರ್ ಅವರನ್ನು ಕ್ಷೇತ್ರ ಪುನರ್ವಿಂಗಡಣೆ ಸಮಿತಿಯ ಸದಸ್ಯರನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಲಿನ ಭಯ ಶುರುವಾಗಿದೆ. ಹೀಗಾಗಿ ಕ್ಷೇತ್ರ ಪುನರ್ವಿಂಗಡಣೆಯ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಎನ್ಡಿಎ ಅಧಿಕಾರಕ್ಕೆ ಬಂದರೆ ಎರಡು ಹಸು ನೀಡುತ್ತೇವೆ ಎಂದ ಎಚ್ಡಿಕೆಗೆ ತಿರುಗೇಟು

ಎನ್ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಎರಡು ಹಸುಗಳನ್ನು ನೀಡುತ್ತೇವೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಗೆಲ್ಲುವ ವಿಶ್ವಾಸವಿದ್ದರೆ ಇತಿಮಿತಿಯಲ್ಲಿ ಮಾತನಾಡುತ್ತಾರೆ. ಇಲ್ಲದಿದ್ದರೆ ಎರಡು ಹಸುಗಳ ಬದಲು ಎತ್ತು ಕೊಡುತ್ತೇನೆ ಎಂದೂ ಹೇಳಬಹುದು ಎಂದು ವ್ಯಂಗ್ಯವಾಡಿದರು.

ಹಿಂದೆ ಅಚ್ಛೇ ದಿನ್ ಬರುತ್ತದೆ ಎಂದು ಹೇಳಿದ್ದರು. ಆದರೆ ಆ ಅಚ್ಛೇ ದಿನ್ ಯಾರಿಗೆ ಬಂದಿದೆ ಎಂದು ಪ್ರಶ್ನಿಸಿದರು.

ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ಕೇಂದ್ರದ ಜವಾಬ್ದಾರಿ ಏನೂ ಇಲ್ಲವೇ?

ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಕುರಿತು ಮಾತನಾಡಿದ ಅವರು, ಪ್ರತಿಭಟನಾಕಾರರ ಮನವೊಲಿಸಲು ಪ್ರತಿನಿತ್ಯ ಪ್ರಯತ್ನಿಸುತ್ತಿದ್ದೇವೆ. ಆದರೂ ಅವರು ತಮ್ಮ ಪ್ರತಿಭಟನೆಯಿಂದ ಹಿಂದೆ ಸರಿಯುತ್ತಿಲ್ಲ ಎಂದರೆ ಏನು ಮಾಡುವುದು ಎಂದು ಪ್ರಶ್ನಿಸಿದರು.

ಆಶಾ ಕಾರ್ಯಕರ್ತೆಯರ ಜವಾಬ್ದಾರಿ ಕೇವಲ ರಾಜ್ಯ ಸರ್ಕಾರದ್ದಷ್ಟೇ ಅಲ್ಲ. ಕೇಂದ್ರ ಸರ್ಕಾರದ ಜವಾಬ್ದಾರಿಯೂ ಇದೆ. ಆಶಾ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಕೇಂದ್ರದ ಪಾಲಿಗಿಂತ ಹೆಚ್ಚಿನ ಹಣವನ್ನು ನೀಡುತ್ತಿದೆ ಎಂದು ತಿಳಿಸಿದರು.

ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ಟಾಂಗ್

ಕಲಬುರಗಿಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ 'ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ' ಪಾದಯಾತ್ರೆ ಕುರಿತು ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಯಾರೆಲ್ಲ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದಾರೋ ಅವರೆಲ್ಲರೂ 'ಮೋದಿ ಕಹೀ ನಹೀ ಜಾಯೇಗಾ' ಎನ್ನುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಮೊದಲು ಚುನಾವಣೆಯಲ್ಲಿ ಸೋತವರನ್ನು ವಿಧಾನಸೌಧಕ್ಕೆ ಕಳುಹಿಸಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande