



ಬಳ್ಳಾರಿ, 28 ನವೆಂಬರ್ (ಹಿ.ಸ.)
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮಕ್ಕಳು ದಿನದ ಬಹುಪಾಲು ಸಮಯವನ್ನು ಶಾಲೆಯಲ್ಲಿ ಕಳೆಯುವುದರಿಂದ ಶಿಕ್ಷಕರು ಪೋಕ್ಸೋ ಕಾಯ್ದೆ ಕುರಿತು ಮಕ್ಕಳಿಗೆ ಅರಿವು ಮೂಡಿಸುವುದರ ಜತೆಗೆ, ಯಾವುದೇ ಸಮಸ್ಯೆಯನ್ನು ಭಯವಿಲ್ಲದೆ ಮುಕ್ತವಾಗಿ ಹೇಳಿಕೊಳ್ಳುವ ವಾತಾವರಣ ನಿರ್ಮಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿದ್ದಲಿಂಗ ಪ್ರಭು ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ 'ಸುರಕ್ಷಿತ ಬಚ್ಪನ್' ಅಭಿಯಾನದಡಿ ಶಿಕ್ಷಕರಿಗೆ ಮಕ್ಕಳ ಹಕ್ಕುಗಳು, ಮಕ್ಕಳ ರಕ್ಷಣೆ ಹಾಗೂ ಪೋಕ್ಸೋ ಕಾಯ್ದೆ-2012 ಕುರಿತು ಆಯೋಜಿಸಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸುವುದು, ಅವರ ವರ್ತನೆ ಹಾಗೂ ಮಾನಸಿಕ ಸ್ಥಿತಿಯಲ್ಲಾಗುವ ಬದಲಾವಣೆಗಳನ್ನು ಸೂಕ್ಷö್ಮವಾಗಿ ಗಮನಿಸುವುದು ಶಿಕ್ಷಕರ ಕರ್ತವ್ಯವಾಗಿದೆ. ಮಕ್ಕಳಲ್ಲಿ ಅಸುರಕ್ಷತೆ ಅಥವಾ ತೊಂದರೆಯ ಲಕ್ಷಣಗಳು ಕಂಡುಬ0ದರೆ ತಕ್ಷಣ ಸ್ಪಂದಿಸಬೇಕು. ಪೋಕ್ಸೋ ಪ್ರಕರಣಗಳು ಸಂಭವಿಸುವ ಸಾಧ್ಯತೆಯಿರುವ ಸ್ಥಳಗಳನ್ನು ಗುರುತಿಸಿ ನವೆಂಬರ್ ತಿಂಗಳಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳನ್ನು ದೌರ್ಜನ್ಯದಿಂದ ರಕ್ಷಿಸಿ ಸುರಕ್ಷಿತ ವಾತಾವರಣ ಕಲ್ಪಿಸುವುದೇ ಇಂತಹ ಅಭಿಯಾನಗಳ ಉದ್ದೇಶವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ತಿಪ್ಪೇಸ್ವಾಮಿ ಮಾತನಾಡಿ, ಶಾಲೆಗಳಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ನಡೆಯದಂತೆ ಶಿಕ್ಷಕರು ಹೆಚ್ಚಿನ ಜಾಗ್ರತೆ ವಹಿಸಬೇಕು. ಮಕ್ಕಳ ಮೇಲಿನ ದೌರ್ಜನ್ಯದ ಬಗ್ಗೆ ಮಾಹಿತಿ ಇದ್ದರೂ ನಿರ್ಲಕ್ಷö್ಯ ವಹಿಸಿದರೆ ಶಿಕ್ಷಕರ ಮೇಲೆಯೂ ಕಾನೂನು ಕ್ರಮ ಜರುಗುವ ಸಾಧ್ಯತೆಯಿದೆ. ಹೀಗಾಗಿ ಪೋಕ್ಸೋ ಕಾಯ್ದೆಯ ನಿಯಮಗಳು ಮತ್ತು ಶಿಕ್ಷಕರ ಕಾನೂನುಬದ್ಧ ಜವಾಬ್ದಾರಿಗಳ ಕುರಿತು ಅರಿವು ಹೊಂದಿರುವುದು ಅಗತ್ಯ ಎಂದು ಹೇಳಿದರು.
ಉಪ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್ ಮಾತನಾಡಿ, ಮಕ್ಕಳ ಮಾನಸಿಕ ಒತ್ತಡ ಹಾಗೂ ವರ್ತನೆಯಲ್ಲಿನ ಬದಲಾವಣೆಗಳನ್ನು ಶಿಕ್ಷಕರು ಗುರುತಿಸಬೇಕು. ಮಕ್ಕಳಿಗೆ ಪೋಕ್ಸೋ ಕಾಯ್ದೆ ಕುರಿತು ಆಗಾಗ ಜಾಗೃತಿ ಮೂಡಿಸುವುದರ ಜತೆಗೆ, ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಳ್ಳುವ ಧೈರ್ಯ ತುಂಬಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್ ಎಂ. ಮಾತನಾಡಿ, ಸಂವಿಧಾನ ಮತ್ತು ಕಾನೂನಿನಡಿ ಮಕ್ಕಳಿಗೆ ವಿಶೇಷ ಹಕ್ಕುಗಳನ್ನು ಕಲ್ಪಿಸಲಾಗಿದೆ. ಅವುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ವಿಶೇಷವಾಗಿ ಬಡತನ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅಗತ್ಯ ಮಾರ್ಗದರ್ಶನ ನೀಡಬೇಕು. ಮಕ್ಕಳ ಸುರಕ್ಷತೆ ಕುರಿತ ಜಾಗೃತಿ ಕಾರ್ಯಕ್ರಮಗಳನ್ನು ಕನಿಷ್ಠ ತಿಂಗಳಿಗೊಮ್ಮೆಯಾದರೂ ಆಯೋಜಿಸಬೇಕು ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್ ಎನ್. ಹೊಸಮನೆ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ತ್ರಿವೇಣಿ ಪತ್ತಾರ್, ರೀಡ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ತಿಪ್ಪೇಶಪ್ಪ, ಸಮಿತಿ ಸದಸ್ಯೆ ವಿಜಯಲಕ್ಷ್ಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್