
ದಾವಣಗೆರೆ, 28 ನವೆಂಬರ್ (ಹಿ.ಸ.):
ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ದಾವಣಗೆರೆಯಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಕೆಬಿ ಬಡಾವಣೆಯಲ್ಲಿರುವ ಬಿಜೆಪಿ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಯದೇವ ಸರ್ಕಲ್, ಹಳೆ ಪಿಬಿ ರಸ್ತೆ ಮೂಲಕ ಮಹಾನಗರ ಪಾಲಿಕೆ ವೃತ್ತದವರೆಗೆ ಸಾಗಿತು.
ಈ ವೇಳೆ ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಿಂದಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಪ್ರಯಾಣಿಕರು ಹಾಗೂ ಬೈಕ್ ಸವಾರರು ಕೆಲಕಾಲ ಪರದಾಡುವಂತಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡರು, ರಾಜ್ಯದಲ್ಲಿ ನಿರಂತರ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಬಡವರು, ರೈತರು, ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಜನರು ಸಂಕಷ್ಟ ಎದುರಿಸುತ್ತಿದ್ದಾರೆ.
ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಈ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ದಾವಣಗೆರೆ ಉತ್ತರ ಕ್ಷೇತ್ರದ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು, ಬಿಜೆಪಿ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R