ಹಾಲು-ಮೊಸರಿನ ಬೆಲೆ ಏರಿಕೆ ಖಂಡಿಸಿ ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ
ಹಾಲು ಮತ್ತು ಮೊಸರಿನ ಬೆಲೆ ಏರಿಕೆ ಖಂಡಿಸಿ ಮಂಡ್ಯದ ಸಂಜಯ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
BJP Protests Against Milk and Curd Price Hike in Mandya


ಮಂಡ್ಯ, 03 ನವೆಂಬರ್ (ಹಿ.ಸ.):

ರಾಜ್ಯ ಸರ್ಕಾರ ಹಾಲು ಮತ್ತು ಮೊಸರಿನ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಸಂಜಯ ವೃತ್ತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಕೈಯಲ್ಲಿ ಹಾಲಿನ ಪ್ಯಾಕೆಟ್ಗಳು ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು 'ಬೆಲೆ ಏರಿಕೆ ದೊರೆ' ಎಂದು ವ್ಯಂಗ್ಯವಾಡುವ ಪೋಸ್ಟರ್ಗಳನ್ನು ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರ ರೈತರು ಮತ್ತು ಜನಸಾಮಾನ್ಯರ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ಹಾಲಿನ ದರ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಮತ್ತೊಂದು ಆರ್ಥಿಕ ಹೊರೆ ಹೊರಿಸಲಾಗಿದೆ. ರೈತರಿಗೆ ಅನುಕೂಲ ಮಾಡಿಕೊಡುತ್ತೇವೆ ಎಂದು ಹೇಳುವ ಸರ್ಕಾರ, ಬೆಲೆ ಏರಿಕೆಯ ಮೂಲಕ ತನ್ನ ಖಜಾನೆ ತುಂಬಿಸಿಕೊಳ್ಳುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.

ಈ ಕುರಿತು ಮಾತನಾಡಿದ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ್ ಜಯರಾಮ್, ಜನರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಟವಾಡುತ್ತಿದ್ದಾರೆ. ಸರ್ಕಾರದ ಬಳಿ ಹಣವಿಲ್ಲ ಎಂದು ಹೇಳುವವರು ಏಕಾಏಕಿ ಹಾಲಿನ ದರ ಏರಿಕೆ ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ರೈತರು ಮತ್ತು ಜನಸಾಮಾನ್ಯರ ಹಿತ ಕಾಪಾಡಬೇಕಾದ ಸರ್ಕಾರ ಅವರ ಮೇಲೆಯೇ ಬೆಲೆ ಏರಿಕೆಯ ಹೊರೆ ಹಾಕುತ್ತಿದೆ. ಮುಂದಿನ ದಿನಗಳಲ್ಲಿ ಜನರೇ ಸರ್ಕಾರಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಸಿದರು.

ಹಾಲಿನ ದರ ಏರಿಕೆ ನಿರ್ಧಾರವನ್ನು ಕೂಡಲೇ ಮರುಪರಿಶೀಲಿಸಬೇಕು. ಇಲ್ಲವಾದಲ್ಲಿ ಬಿಜೆಪಿ ವತಿಯಿಂದ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ದೊಡ್ಡ ಮಟ್ಟದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande