ಮುರಾಸು ಚಂಡಮಾರುತ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು, 03 ನವೆಂಬರ್ (ಹಿ.ಸ.): ಬಂಗಾಳ ಕೊಲ್ಲಿಯಲ್ಲಿ ತೀವ್ರಗೊಂಡಿರುವ ಮುರಸು ಚಂಡಮಾರುತ ಆಂಧ್ರಪ್ರದೇಶದ ಕರಾವಳಿಯತ್ತ ಮುನ್ನುಗ್ಗುತ್ತಿದ್ದು, ಇದರ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗ
Cyclone-Murusu-Heavy-Rain-Alert-Karnataka-Districts


ಬೆಂಗಳೂರು, 03 ನವೆಂಬರ್ (ಹಿ.ಸ.):

ಬಂಗಾಳ ಕೊಲ್ಲಿಯಲ್ಲಿ ತೀವ್ರಗೊಂಡಿರುವ ಮುರಸು ಚಂಡಮಾರುತ ಆಂಧ್ರಪ್ರದೇಶದ ಕರಾವಳಿಯತ್ತ ಮುನ್ನುಗ್ಗುತ್ತಿದ್ದು, ಇದರ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ನವೆಂಬರ್ 5ರವರೆಗೆ ರಾಜ್ಯದ ವಿವಿಧೆಡೆ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ತೀವ್ರಗೊಂಡಿರುವ ಚಂಡಮಾರುತ ಆಂಧ್ರಪ್ರದೇಶದ ನೆಲ್ಲೂರು ಮತ್ತು ನರಸಾಪುರ ನಡುವಿನ ಕರಾವಳಿ ಪ್ರದೇಶವನ್ನು ಪ್ರವೇಶಿಸುವ ಸಾಧ್ಯತೆಯಿದೆ.

ಈ ಸಂದರ್ಭದಲ್ಲಿ ಗಂಟೆಗೆ 100ರಿಂದ 110 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರವೂ ಹೆಚ್ಚಾಗುವ ಸಾಧ್ಯತೆಯಿದ್ದು, ಕರಾವಳಿ ಭಾಗಗಳಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಚಂಡಮಾರುತದ ಪ್ರಭಾವದಿಂದ ಆಂಧ್ರಪ್ರದೇಶ, ತಮಿಳುನಾಡು, ರಾಯಲಸೀಮಾ, ತೆಲಂಗಾಣ ಸೇರಿದಂತೆ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆಯಿದೆ.

ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನದಲ್ಲಿ ಬದಲಾವಣೆಯಾಗಲಿದ್ದು, ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗುವ ಅಥವಾ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಕೆಲವೆಡೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವುದರೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವೆ ಇರಲಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳ ಬಹುತೇಕ ಕಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಚಂಡಮಾರುತದ ಪ್ರಭಾವದಿಂದ ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ವಿವಿಧೆಡೆ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande