
ಬೆಂಗಳೂರು03 ನವೆಂಬರ್ (ಹಿ.ಸ.):
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಹನಿಟ್ರ್ಯಾಪ್ ಹಾಗೂ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಸಾರ್ವಜನಿಕ ಸಂಪರ್ಕಾಧಿಕಾರಿ (ಪಿಆರ್ಒ) ಪ್ರಜ್ವಲ್ ಪ್ರಸಾದ್ ಅವರು ಇಂದು ಸಿಸಿಬಿ ಸೈಬರ್ ಕ್ರೈಂ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ರಿತೇಶ್ ಪಾಂಡೆ ಅವರಿಗೆ ದೆಹಲಿಯಲ್ಲಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನಿವಾಸದಲ್ಲಿ ಮೊಬೈಲ್ ಫೋನ್ ಹಸ್ತಾಂತರಿಸಿದ ಆರೋಪ ಪ್ರಜ್ವಲ್ ಪ್ರಸಾದ್ ವಿರುದ್ಧ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಸೈಬರ್ ಕ್ರೈಂ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದರು.
ಇತ್ತೀಚೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಪ್ರಜ್ವಲ್ ಪ್ರಸಾದ್ ನಾಪತ್ತೆಯಾಗಿರುವುದಾಗಿ ಮಾಹಿತಿ ನೀಡಿದ್ದರು.
ಆದರೆ, ಪ್ರಜ್ವಲ್ ಪ್ರಸಾದ್ ಅವರು ನ್ಯಾಯಾಲಯದಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು. ಇದೀಗ ಪೊಲೀಸರ ನೋಟಿಸ್ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸುತ್ತಿದ್ದಾರೆ.
ಹನಿಟ್ರ್ಯಾಪ್ ಹಾಗೂ ಸ್ಟಿಂಗ್ ಆಪರೇಷನ್ ಪ್ರಕರಣದ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿರುವ ಸಿಸಿಬಿ ಪೊಲೀಸರು, ಪ್ರಜ್ವಲ್ ಪ್ರಸಾದ್ ಅವರಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R