ಬಸ್ ಪ್ರಯಾಣ ದರ ಏರಿಕೆ ಹಿಂಪಡೆಯಿರಿ: ವಿಜಯೇಂದ್ರ ಆಗ್ರಹ
ಬೆಂಗಳೂರು, 04 ನವೆಂಬರ್ (ಹಿ.ಸ.): ಹಾಲು, ಮೊಸರು ಮತ್ತು ವಿದ್ಯುತ್ ದರ ಏರಿಕೆಯ ಬೆನ್ನಲ್ಲೇ ಇದೀಗ ಬಸ್ ಪ್ರಯಾಣ ದರವನ್ನೂ ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ಜನಸಾಮಾನ್ಯರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹೊರಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ. ಈ ಕುರಿತು ಪತ್ರಿಕ
ವಿಜಯೇಂದ್ರ ಫೈಲ್ ಪೋಟೋ


ಬೆಂಗಳೂರು, 04 ನವೆಂಬರ್ (ಹಿ.ಸ.):

ಹಾಲು, ಮೊಸರು ಮತ್ತು ವಿದ್ಯುತ್ ದರ ಏರಿಕೆಯ ಬೆನ್ನಲ್ಲೇ ಇದೀಗ ಬಸ್ ಪ್ರಯಾಣ ದರವನ್ನೂ ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ಜನಸಾಮಾನ್ಯರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹೊರಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಬೆಂಗಳೂರಿನಲ್ಲಿ ಕನಿಷ್ಠ ಬಸ್ ಟಿಕೆಟ್ ದರವನ್ನು 6 ರೂ.ನಿಂದ 10 ರೂ.ಗೆ ಹೆಚ್ಚಿಸಲಾಗಿದ್ದು, ಇದು ಸುಮಾರು ಶೇ.67ರಷ್ಟು ಏರಿಕೆಯಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಗರಿಷ್ಠ 9 ರೂ.ವರೆಗೆ ದರ ಹೆಚ್ಚಳವಾಗಿದ್ದು, ಒಟ್ಟಾರೆ 4ರಿಂದ 20 ರೂ.ವರೆಗೆ ಪ್ರಯಾಣಿಕರ ಮೇಲೆ ಹೆಚ್ಚುವರಿ ಹೊರೆ ಬಿದ್ದಿದೆ ಎಂದು ತಿಳಿಸಿದ್ದಾರೆ.

ಹೊಸ ದರ ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ. ದುಡಿಯಲು ತೆರಳುವ ಕಾರ್ಮಿಕರು, ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು, ಆಸ್ಪತ್ರೆಗೆ ತೆರಳುವ ಬಡ ರೋಗಿಗಳು ಹಾಗೂ ಸಾಮಾನ್ಯ ಜನರು ಸರ್ಕಾರದ ಆರ್ಥಿಕ ನಿರ್ವಹಣೆಯ ಹೊರೆ ಹೊರಬೇಕೇ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ.

ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವುದಾಗಿ ಹೇಳಿಕೊಳ್ಳುತ್ತಾ, ಮತ್ತೊಂದೆಡೆ ಬೆಲೆ ಏರಿಕೆಯ ಮೂಲಕ ಜನರ ಜೇಬಿಗೆ ಹೊರೆ ಹಾಕಲಾಗುತ್ತಿದೆ. ಹಾಲಿನ ದರ ಏರಿಕೆಯ ಬೆನ್ನಲ್ಲೇ ಬಸ್ ಪ್ರಯಾಣವನ್ನೂ ದುಬಾರಿಗೊಳಿಸಿರುವುದರಿಂದ ಜನರ ದೈನಂದಿನ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ಆರೋಪಿಸಿದ್ದಾರೆ.

ಸಾರಿಗೆ ನಿಗಮಗಳ ನಷ್ಟದ ಸಂಪೂರ್ಣ ಲೆಕ್ಕವನ್ನು ಜನರ ಮುಂದಿಡಬೇಕು. ಬಸ್ ಪ್ರಯಾಣ ದರ ಏರಿಕೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande