ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು
ಹೌದು, ನಾನು ಹಳ್ಳಿಯವನೇ, ಹಳ್ಳಿಯವನೆಂದು ಹೇಳಿಕೊಳ್ಳಲು ಹೆಮ್ಮೆಯಿದೆ’ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಿಯಾಂಕ್ ಖರ್ಗೆ ಟೀಕೆಗೆ ತಿರುಗೇಟು ನೀಡಿದ್ದಾರೆ. ಗಾಂಧೀಜಿ ಅವರ ಗ್ರಾಮೀಣ ಭಾರತದ ಪರಿಕಲ್ಪನೆಯನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
hd-kumaraswamy-hits-back-at-priyank-kharge-over-village-remark


ಬೆಂಗಳೂರು, 05 ನವೆಂಬರ್ (ಹಿ.ಸ.):

ಭಾರತದ ಆತ್ಮ ಹಳ್ಳಿಗಳಲ್ಲಿದೆ’ ಎಂಬ ಮಹಾತ್ಮ ಗಾಂಧೀಜಿ ಅವರ ಮಾತನ್ನು ಉಲ್ಲೇಖಿಸುವ ಮೂಲಕ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ತಿರುಗೇಟು ನೀಡಿದ್ದಾರೆ.

ತಮ್ಮನ್ನು ‘ಹಳ್ಳಿ ಗುಗ್ಗು’ ಎಂದು ಟೀಕಿಸಿದ್ದ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ‘ಹೌದು, ನಾನು ಹಳ್ಳಿಯವನೇ. ಹಳ್ಳಿಯವನೆಂದು ಹೇಳಿಕೊಳ್ಳಲು ನನಗೆ ಹೆಮ್ಮೆಯಿದೆ’ ಎಂದು ತೀಕ್ಷ್ಣವಾಗಿ ಉತ್ತರಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ‘ನಿಜ, ನಾನು ಹಳ್ಳಿಯವನು. ಅಲ್ಲೇ ಹುಟ್ಟಿ, ಹಟ್ಟಿಯಲ್ಲಿ ಆಡಿ ಬೆಳೆದವನು.

ಹಳ್ಳಿಯವನು ಎಂದು ಹೇಳಿಕೊಳ್ಳಲು ನನಗೆ ಹೆಮ್ಮೆ ಇದೆ. ಹಳ್ಳಿಗರೆಂದರೆ ಗುಗ್ಗುಗಳಲ್ಲ’ ಎಂದು ಹೇಳಿದ್ದಾರೆ.

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ‘ಗೃಹ ಇಲಾಖೆಗೆ ನಾಲಾಯಕ್’ ಎಂದು ಕುಮಾರಸ್ವಾಮಿ ಟೀಕಿಸಿದ್ದಕ್ಕೆ ಪ್ರತಿಕ್ರಿಯಿಸಿದ್ದ ಖರ್ಗೆ, ‘ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವರಿಗೆ ಸಾಮಾನ್ಯ ಪ್ರಜ್ಞೆ ಇಲ್ಲವೇ? ಮಕ್ಕಳ ಆಟ ಆಡುತ್ತಿದ್ದಾರಾ? ಜನರು ನಿಮಗೆ ಈಗಾಗಲೇ ಸರ್ಟಿಫಿಕೇಟ್ ಕೊಟ್ಟಿದ್ದಾರೆ.

ನಿಮ್ಮ ರಾಜಕೀಯ ಜೀವನದಲ್ಲಿ ಒಂದು ಬಾರಿಯೂ 100 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿಲ್ಲ. ಚಿಕ್ಕ ಮಕ್ಕಳಂತೆ ಮಾತನಾಡುವ ಮೂಲಕ ತಮ್ಮ ಘನತೆಯನ್ನು ಕಳೆದುಕೊಳ್ಳುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದರು.

ಇದಕ್ಕೆ ಪ್ರತಿಯಾಗಿ ಕುಮಾರಸ್ವಾಮಿ ಅವರು ಹಳ್ಳಿಯ ಹಿನ್ನೆಲೆಯನ್ನು ಹೆಮ್ಮೆಯಿಂದ ಸಮರ್ಥಿಸಿಕೊಂಡಿದ್ದು, ಗಾಂಧೀಜಿ ಅವರ ಗ್ರಾಮೀಣ ಭಾರತದ ಪರಿಕಲ್ಪನೆಯನ್ನು ಮುಂದಿಟ್ಟುಕೊಂಡು ಪ್ರಿಯಾಂಕ್ ಖರ್ಗೆ ಅವರಿಗೆ ತಿರುಗೇಟು ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande