
ಬೆಂಗಳೂರು, 06 ನವೆಂಬರ್ (ಹಿ.ಸ.):
ರಾಜ್ಯದಲ್ಲಿ ಬರದಿಂದಾಗಿ ಸುಮಾರು ₹62 ಸಾವಿರ ಕೋಟಿ ನಷ್ಟ ಉಂಟಾಗಿದ್ದು, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (ಎನ್ಡಿಆರ್ಎಫ್) ಮಾರ್ಗಸೂಚಿಗಳ ಅನ್ವಯ ₹22 ಸಾವಿರ ಕೋಟಿ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮೂರು ಮನವಿ ಪತ್ರಗಳನ್ನು ಸಲ್ಲಿಸಲಾಗಿದೆ. ಪ್ರಧಾನಮಂತ್ರಿ, ಕೇಂದ್ರ ಗೃಹ ಸಚಿವರು ಹಾಗೂ ಕೃಷಿ ಸಚಿವರನ್ನು ಖುದ್ದಾಗಿ ಭೇಟಿಯಾಗಿ ರಾಜ್ಯದ ಪರಿಸ್ಥಿತಿಯನ್ನು ವಿವರಿಸಲು ಸಮಯಾವಕಾಶ ಕೋರಿ ಪತ್ರ ಬರೆಯಲಾಗಿದೆ. ಅವಕಾಶ ದೊರೆತರೆ ಸರ್ವಪಕ್ಷ ನಿಯೋಗದೊಂದಿಗೆ ತೆರಳಿ ಮನವಿ ಸಲ್ಲಿಸಲಾಗುವುದು. ಇಲ್ಲವಾದರೆ ಮುಖ್ಯಮಂತ್ರಿ ನೇತೃತ್ವದಲ್ಲಿ ನಿಯೋಗ ತೆರಳಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಬರದಿಂದ ಉಂಟಾಗಿರುವ ಒಟ್ಟು ನಷ್ಟ ಸುಮಾರು ₹62 ಸಾವಿರ ಕೋಟಿ ಎಂದು ಅಂದಾಜಿಸಲಾಗಿದೆ. ಆದರೆ ಸಂಪೂರ್ಣ ಮೊತ್ತವನ್ನು ಕೇಂದ್ರದಿಂದ ಕೇಳಲು ಸಾಧ್ಯವಿಲ್ಲ. ಎನ್ಡಿಆರ್ಎಫ್ ಮಾರ್ಗಸೂಚಿಗಳ ಪ್ರಕಾರ ಲೆಕ್ಕಾಚಾರ ಮಾಡಿ ₹22 ಸಾವಿರ ಕೋಟಿ ಪರಿಹಾರ ಕೋರಲಾಗಿದೆ ಎಂದರು.
ರಾಜ್ಯ ಸರ್ಕಾರ ಮೊದಲ ಹಂತದಲ್ಲಿ ರೈತರಿಗೆ ತಲಾ ₹2,500 ಬರ ಪರಿಹಾರ ನೀಡಲು ₹1,250 ಕೋಟಿ ಬಿಡುಗಡೆ ಮಾಡಿದೆ. ಈ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ರೈತರ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ. ಯಾದಗಿರಿ ಜಿಲ್ಲೆಯಲ್ಲಿ ಈಗಾಗಲೇ ಮೂರು ಲಕ್ಷಕ್ಕೂ ಹೆಚ್ಚು ರೈತರಿಗೆ ಪರಿಹಾರ ತಲುಪಿದೆ. ಹೆಚ್ಚುವರಿಯಾಗಿ ಮತ್ತೊಂದು ₹2,500 ನೀಡಲು ಮುಖ್ಯಮಂತ್ರಿ ಸಮ್ಮತಿಸಿದ್ದು, ಮುಂದಿನ ಒಂದು ವಾರದಿಂದ 15 ದಿನಗಳೊಳಗೆ ಈ ಮೊತ್ತ ಬಿಡುಗಡೆ ಮಾಡಲಾಗುವುದು. ಇದಕ್ಕಾಗಿ ಹೆಚ್ಚುವರಿಯಾಗಿ ₹1,250 ಕೋಟಿ ವೆಚ್ಚವಾಗಲಿದೆ. ಹೀಗಾಗಿ ರೈತರಿಗೆ ಒಟ್ಟು ತಲಾ ₹5 ಸಾವಿರ ಪರಿಹಾರ ದೊರೆಯಲಿದೆ ಎಂದು ತಿಳಿಸಿದರು.
ಬರ ನಿರ್ವಹಣೆಗೆ ಕುಡಿಯುವ ನೀರಿನ ವ್ಯವಸ್ಥೆಗೂ ಆದ್ಯತೆ ನೀಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ₹1 ಕೋಟಿ ಹಾಗೂ ಜಿಲ್ಲೆಗಳಿಗೆ ₹4ರಿಂದ ₹5 ಕೋಟಿ ಅನುದಾನ ಒದಗಿಸಲಾಗಿದೆ. ಕೇಂದ್ರದಿಂದ ಹೆಚ್ಚಿನ ನೆರವು ದೊರೆತರೆ ರೈತರಿಗೆ ಮತ್ತಷ್ಟು ಪರಿಹಾರ ನೀಡುವುದರ ಜತೆಗೆ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗಲಿದೆ ಎಂದರು
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.