
ಕಲಬುರಗಿ, 06 ನವೆಂಬರ್ (ಹಿ.ಸ.):
ಕಬ್ಬಿಗೆ ಏಕರೂಪ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಲಬುರಗಿಯಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ನಗರದ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಿ, ರಸ್ತೆ ತಡೆದು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕಬ್ಬಿಗೆ ಏಕರೂಪ ಬೆಲೆ ನಿಗದಿಪಡಿಸಬೇಕು. ಈಗಾಗಲೇ ಕೆಲವು ಭಾಗಗಳಲ್ಲಿ ಕಬ್ಬಿಗೆ ಪ್ರತಿ ಟನ್ಗೆ 3,600 ರೂ. ನೀಡುವ ಬೇಡಿಕೆ ಈಡೇರಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಕಬ್ಬು ಬೆಳೆಗಾರರಿಗೂ ಅದೇ ದರ ನೀಡಬೇಕು ಎಂದು ರೈತರು ಒತ್ತಾಯಿಸಿದರು.
ಇದೇ ವೇಳೆ ತೊಗರಿ ಮತ್ತು ಹತ್ತಿ ಬೆಳೆಗಾರರ ಸಮಸ್ಯೆಗಳನ್ನೂ ಪ್ರಸ್ತಾಪಿಸಿದ ಪ್ರತಿಭಟನಾಕಾರರು, ತೊಗರಿ ಹಾಗೂ ಹತ್ತಿಗೆ ಪ್ರತಿ ಕ್ವಿಂಟಲ್ಗೆ 15 ಸಾವಿರ ರೂ. ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿದರು.
ರೈತರ ಆಕ್ರೋಶದ ಮಾತು: ಕಬ್ಬು ಬೆಳೆಗಾರರಿಗೆ ರಾಜ್ಯಾದ್ಯಂತ ಏಕರೂಪ ಬೆಲೆ ದೊರೆಯಬೇಕು. ಕಲಬುರಗಿ ಜಿಲ್ಲೆಯ ರೈತರಿಗೂ ಪ್ರತಿ ಟನ್ಗೆ 3,600 ರೂ. ನೀಡಬೇಕು.
ತೊಗರಿ ಮತ್ತು ಹತ್ತಿ ಬೆಳೆಗಾರರ ಹಿತ ಕಾಪಾಡಲು ಪ್ರತಿ ಕ್ವಿಂಟಲ್ಗೆ 15 ಸಾವಿರ ರೂ. ಬೆಲೆ ನಿಗದಿಪಡಿಸಬೇಕು.
ಸರ್ಕಾರಗಳು ರೈತರ ಬೇಡಿಕೆಗಳನ್ನು ನಿರ್ಲಕ್ಷಿಸದೆ ಕೂಡಲೇ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯ ವೇಳೆ ರೈತರು ಸರ್ಕಾರಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R