
ಲಾಹೋರ್ (ಪಂಜಾಬ್), ಪಾಕಿಸ್ತಾನ, 06 ನವೆಂಬರ್ (ಹಿ.ಸ.):
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಪಾಕಪಟ್ಟಣ ಸಮೀಪ ಪ್ರಯಾಣಿಕರ ಬಸ್ ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ಮೃತಪಟ್ಟಿದ್ದು, 33 ಜನರು ಗಾಯಗೊಂಡಿದ್ದಾರೆ.
ಗುರುವಾರ ಈ ಅಪಘಾತ ಸಂಭವಿಸಿದೆ ಎಂದು ರಕ್ಷಣಾ ಕಾರ್ಯಾಚರಣೆ ಸಂಸ್ಥೆ ರಕ್ಷಣಾ 1122 ತಿಳಿಸಿದೆ. ಅಪಘಾತದಲ್ಲಿ 11 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡವರ ಪೈಕಿ ಎಂಟು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದ 25 ಮಂದಿಯನ್ನು ಪಾಕಪಟ್ಟಣದ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಿಲ್ಲಾಡಳಿತದ ಪತ್ರಿಕಾ ಪ್ರಕಟಣೆಯನ್ನು ಉಲ್ಲೇಖಿಸಿ ಡಾನ್ ಪತ್ರಿಕೆ ವರದಿ ಮಾಡಿರುವ ಪ್ರಕಾರ, ದೇಪಾಲಪುರ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಮುಲ್ತಾನ್ನಿಂದ ಕಸೂರ್ಗೆ ತೆರಳುತ್ತಿದ್ದ ಪ್ರಯಾಣಿಕರ ಬಸ್ ಮತ್ತು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಯ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ವಿಷಯ ತಿಳಿದ ತಕ್ಷಣ ಜಿಲ್ಲಾಧಿಕಾರಿ ಆಸಿಫ್ ರಜಾ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾವೇದ್ ಇಕ್ಬಾಲ್ ಚಧರ್ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದರು. ರಕ್ಷಣಾ 1122 ಸಿಬ್ಬಂದಿ ಹಾಗೂ ಜಿಲ್ಲಾಡಳಿತದ ತಂಡಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದವು. ಸುಮಾರು ಮೂರು ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಕ್ರೇನ್ ಸೇರಿದಂತೆ ಭಾರೀ ಯಂತ್ರೋಪಕರಣಗಳನ್ನು ಬಳಸಿ ಅವಶೇಷಗಳಡಿ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆಯಲಾಯಿತು.
ಘಟನೆಗೆ ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸಿರುವ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಮರಿಯಮ್ ನವಾಜ್ ಕೂಡ ಘಟನೆಗೆ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ರಾಷ್ಟ್ರೀಯ ಸಂಸತ್ತಿನ ಸಭಾಧ್ಯಕ್ಷ ಸರ್ದಾರ್ ಅಯಾಜ್ ಸಾದಿಕ್ ಕೂಡ ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.