
ಬೆಂಗಳೂರು, 06 ನವೆಂಬರ್ (ಹಿ.ಸ.):
ಕೇಂದ್ರ ಸರ್ಕಾರದ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯ ಪರಿಣಾಮ ಸಾರಿಗೆ ವಲಯ ಮಾತ್ರವಲ್ಲದೆ ಕೃಷಿ ಚಟುವಟಿಕೆಗಳ ಮೇಲೂ ಬೀರುತ್ತಿದೆ. ಇಂಧನ ಬೆಲೆ ಹೆಚ್ಚಳದಿಂದ ರೈತರ ಕೃಷಿ ವೆಚ್ಚವೂ ಏರಿಕೆಯಾಗುತ್ತದೆ. ಈ ಅಂಶಗಳನ್ನು ಪರಿಗಣಿಸದೆ ರಾಜ್ಯ ಸರ್ಕಾರವನ್ನು ಮಾತ್ರ ಟೀಕಿಸುವುದು ಅರ್ಥಹೀನ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹೇಳಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಾರಿಗೆ ದರ ಮೂರು ಬಾರಿ ಏರಿಕೆಯಾಗಿದೆ ಎಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಆದರೆ ಕೇಂದ್ರ ಸರ್ಕಾರದ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯನ್ನು ಏಕೆ ಪ್ರಶ್ನಿಸುತ್ತಿಲ್ಲ ಎಂದು ಆಕ್ಷೇಪಿಸಿದರು.
ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸುಮಾರು 14 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ. ಇದರ ನೇರ ಪರಿಣಾಮ ಸಾರಿಗೆ ವೆಚ್ಚದ ಮೇಲೆ ಬೀಳುತ್ತದೆ. ಕೃಷಿ ಚಟುವಟಿಕೆಗಳಿಗೆ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಕೆಲಸಗಳಿಗೆ ರೈತರು ಡೀಸೆಲ್ ಅವಲಂಬಿಸಿದ್ದಾರೆ. ಇಂಧನ ದರ ಹೆಚ್ಚಾದಾಗ ಕೃಷಿ ವೆಚ್ಚವೂ ಹೆಚ್ಚಾಗುತ್ತದೆ. ಹೀಗಾಗಿ ಇವೆಲ್ಲವೂ ಪರಸ್ಪರ ಸಂಬಂಧ ಹೊಂದಿರುವ ಪರಿಣಾಮಗಳಾಗಿವೆ ಎಂದು ಹೇಳಿದರು.
ಸರ್ಕಾರ ಎಲ್ಲ ವರ್ಗದ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಬರದಿಂದ ಸುಮಾರು 50 ಲಕ್ಷ ರೈತರು 67 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆ ನಷ್ಟ ಅನುಭವಿಸಿದ್ದಾರೆ. ಅವರಿಗೆ ಪರಿಹಾರ ನೀಡಬೇಕಿದೆ. ಕಬ್ಬು ಬೆಳೆಗಾರರ ಸಮಸ್ಯೆಗಳನ್ನೂ ಪರಿಹರಿಸಬೇಕಿದೆ. ಲಕ್ಷಾಂತರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸುವಾಗಲೂ ಆರ್ಥಿಕ ಲೆಕ್ಕಾಚಾರ ಮಾಡಬೇಕಾಗುತ್ತದೆ ಎಂದರು.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ರಾಜ್ಯದ ಆದಾಯ ಉತ್ತಮವಾಗಿದೆ. ವಾಣಿಜ್ಯ ತೆರಿಗೆ, ಅಬಕಾರಿ ತೆರಿಗೆ, ಮುದ್ರಾಂಕ ಮತ್ತು ನೋಂದಣಿ ಇಲಾಖೆಗಳ ಮೂಲಕ ಉತ್ತಮ ಆದಾಯ ಸಂಗ್ರಹವಾಗುತ್ತಿದೆ. ಆದಾಯ ಮತ್ತು ವೆಚ್ಚದ ಸ್ಥಿತಿಗತಿಗಳನ್ನು ಪರಿಶೀಲಿಸಿಯೇ ಸರ್ಕಾರ ವಿವಿಧ ಕ್ರಮಗಳನ್ನು ಕೈಗೊಂಡಿದೆ ಎಂದು ಸ್ಪಷ್ಟಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.