ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಪತ್ತೆ; ಹಲವು ಅಂಗಡಿಗಳಿಗೆ ದಂಡ, ಪ್ರಕರಣ ದಾಖಲು
ಬಾಗಲಕೋಟೆ, 06 ನವೆಂಬರ್ (ಹಿ.ಸ.) ಬಾಗಲಕೋಟೆ ನಗರದ ನವನಗರ ಬಸ್ ನಿಲ್ದಾಣ ವ್ಯಾಪ್ತಿಯಲ್ಲಿರುವ ವಿವಿಧ ಬೇಕರಿ ಅಂಗಡಿಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿರುವುದು ಹಾಗೂ ಅಗತ್ಯ ಪರ
ದಾಳಿ


ಬಾಗಲಕೋಟೆ, 06 ನವೆಂಬರ್ (ಹಿ.ಸ.)

ಬಾಗಲಕೋಟೆ ನಗರದ ನವನಗರ ಬಸ್ ನಿಲ್ದಾಣ ವ್ಯಾಪ್ತಿಯಲ್ಲಿರುವ ವಿವಿಧ ಬೇಕರಿ ಅಂಗಡಿಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿರುವುದು ಹಾಗೂ ಅಗತ್ಯ ಪರವಾನಗಿ ಪಡೆಯದೇ ವ್ಯಾಪಾರ ನಡೆಸುತ್ತಿರುವುದು ಪತ್ತೆಯಾಗಿದ್ದು, ಹಲವು ಅಂಗಡಿಗಳ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ನವನಗರ ಬಸ್ ನಿಲ್ದಾಣದ ಸುತ್ತಮುತ್ತಲಿನ ಬೇಕರಿ ಅಂಗಡಿಗಳಲ್ಲಿ ಆಹಾರ ಪದಾರ್ಥಗಳ ಗುಣಮಟ್ಟ, ಸ್ವಚ್ಛತೆ, ಸಂಗ್ರಹಣೆ ಹಾಗೂ ಆಹಾರ ಸುರಕ್ಷತಾ ನಿಯಮಗಳ ಪಾಲನೆ ಕುರಿತು ಪರಿಶೀಲನೆ ನಡೆಸಲಾಯಿತು. ಉಪ ವಿಭಾಗಾಧಿಕಾರಿಗಳಾಗಿರುವ ಜಿಲ್ಲಾ ಅಂಕಿತ ಅಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅವರ ನೇತೃತ್ವದ ತಂಡ ವಿವಿಧ ಬೇಕರಿಗಳಿಗೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿತು.

ತಪಾಸಣೆ ವೇಳೆ ಕೆಲವು ಅಂಗಡಿಗಳು ಅಗತ್ಯ ಆಹಾರ ಸುರಕ್ಷತಾ ಪರವಾನಗಿ ಪಡೆಯದೇ ವ್ಯಾಪಾರ ನಡೆಸುತ್ತಿರುವುದು ಕಂಡುಬಂದಿದೆ.

ಅಂತಹ ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಅಲ್ಲದೆ, ಕೆಲವು ಬೇಕರಿಗಳಲ್ಲಿ ಅವಧಿ ಮುಗಿದ ಆಹಾರ ಪದಾರ್ಥಗಳನ್ನು ಮಾರಾಟಕ್ಕೆ ಇಟ್ಟಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.

ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಇಂತಹ ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಿದ ಅಧಿಕಾರಿಗಳು, ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಂಡಿದ್ದಾರೆ.

ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದ ಹಲವು ಬೇಕರಿ ಅಂಗಡಿಗಳ ಮಾಲೀಕರಿಗೆ ದಂಡ ವಿಧಿಸಲಾಗಿದ್ದು, ಕೆಲವು ಪ್ರಕರಣಗಳನ್ನು ದಾಖಲಿಸಲಾಗಿದೆ. ನಿಯಮಬಾಹಿರವಾಗಿ ವ್ಯಾಪಾರ ನಡೆಸುವವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಬೇಕರಿ ಹಾಗೂ ಆಹಾರ ಮಾರಾಟ ಮಳಿಗೆಗಳ ಮಾಲೀಕರು ಕಡ್ಡಾಯವಾಗಿ ಆಹಾರ ಸುರಕ್ಷತಾ ಪರವಾನಗಿ ಪಡೆದುಕೊಳ್ಳಬೇಕು. ಆಹಾರ ಪದಾರ್ಥಗಳ ತಯಾರಿಕೆ ಮತ್ತು ಮಾರಾಟದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಅವಧಿ ಮುಗಿದ ಆಹಾರ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಮಾರಾಟ ಮಾಡಬಾರದು.

ಗ್ರಾಹಕರ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ರೀತಿಯಲ್ಲಿ ನಿರ್ಲಕ್ಷ್ಯ ತೋರಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ಸುರಕ್ಷಿತ ಆಹಾರ ದೊರೆಯುವಂತೆ ಮಾಡಲು ಇಂತಹ ತಪಾಸಣೆಗಳನ್ನು ಮುಂದುವರಿಸಲಾಗುವುದು. ಆಹಾರ ಸುರಕ್ಷತಾ ನಿಯಮಗಳನ್ನು ಪ್ರತಿಯೊಬ್ಬ ವ್ಯಾಪಾರಿಯೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ದಾಳಿ ಹಾಗೂ ಪರಿಶೀಲನಾ ಕಾರ್ಯಾಚರಣೆಯಲ್ಲಿ ತಹಶೀಲ್ದಾರ ವಾಸುದೇವ ಸ್ವಾಮಿ, ನಗರಸಭೆ ಪೌರಾಯುಕ್ತ ಎಂ.ಎಂ. ಸಾರವಾನ ಹಾಗೂ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ ಸಾಳಗುಂದಿ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande