
ಮಂಡ್ಯ, 06 ನವೆಂಬರ್ (ಹಿ.ಸ.):
ರೈಲಿಗೆ ಸಿಲುಕಿ ಪ್ರೇಮಿಗಳಿಬ್ಬರು ಮೃತಪಟ್ಟಿರುವ ಘಟನೆ ಮಂಡ್ಯ ನಗರದ ಹೊರವಲಯದ ಇಂಡುವಾಳು ಸಮೀಪದ ರೈಲ್ವೆ ಹಳಿಯಲ್ಲಿ ನಡೆದಿದೆ.
ಬೆಂಗಳೂರು ಮೂಲದ ಸಹನಾ (25) ಹಾಗೂ ಮಂಡ್ಯ ಮೂಲದ ರಾಹುಲ್ (30) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇಬ್ಬರೂ ರೈಲಿಗೆ ಸಿಲುಕಿ ಮೃತಪಟ್ಟಿದ್ದು, ದೇಹಗಳು ಛಿದ್ರ ಛಿದ್ರವಾಗಿವೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಇದು ಆತ್ಮಹತ್ಯೆ ಪ್ರಕರಣವೆಂದು ಶಂಕಿಸಲಾಗಿದೆ.
ಮೃತ ಸಹನಾಗೆ ಈಗಾಗಲೇ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ. ರಾಹುಲ್ ಅವರ ವೈಯಕ್ತಿಕ ಹಿನ್ನೆಲೆಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಮಂಡ್ಯ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R