ಬಳ್ಳಾರಿ: ಅಲ್ಪಸಂಖ್ಯಾತರ ಅಭಿವೃದ್ಧಿಗೆ ಅನುದಾನ ಬಿಡುಗಡೆ
ಬಳ್ಳಾರಿ, 07 ನವೆಂಬರ್ (ಹಿ.ಸ.) ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಸಮಗ್ರ ಕಲ್ಯಾಣ, ಶೈಕ್ಷಣಿಕ ಪ್ರಗತಿ ಹಾಗೂ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಡಿ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆ ಮಾಡಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾ
ಬಳ್ಳಾರಿ: ಅಲ್ಪಸಂಖ್ಯಾತರ ಅಭಿವೃದ್ಧಿಗೆ ಅನುದಾನ ಬಿಡುಗಡೆ


ಬಳ್ಳಾರಿ, 07 ನವೆಂಬರ್ (ಹಿ.ಸ.)

ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಸಮಗ್ರ ಕಲ್ಯಾಣ, ಶೈಕ್ಷಣಿಕ ಪ್ರಗತಿ ಹಾಗೂ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಡಿ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆ ಮಾಡಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

2011ರ ಜನಗಣತಿಯ ಪ್ರಕಾರ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 24,52,595 ಜನಸಂಖ್ಯೆ ಇದ್ದು, ಇದರಲ್ಲಿ 3,44,205 ರಷ್ಟು ಅಲ್ಪಸಂಖ್ಯಾತ ಸಮುದಾಯದ ಜನರಿದ್ದಾರೆ. ಇದು ಜಿಲ್ಲೆಯ ಒಟ್ಟು ಜನಸಂಖ್ಯೆಯ ಶೇಕಡಾ 14 ರಷ್ಟಾಗಿದೆ.

*ಶೈಕ್ಷಣಿಕ ಪ್ರಗತಿ ಮತ್ತು ವಸತಿ ಶಾಲೆಗಳು:*

ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಒಟ್ಟು 6 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ 6 ರಿಂದ 10ನೇ ತರಗತಿಯವರೆಗೆ ರಾಜ್ಯ ಪಠ್ಯಕ್ರಮದಲ್ಲಿ 959 ವಿದ್ಯಾರ್ಥಿಗಳು ಹಾಗೂ ಸಿ.ಬಿ.ಎಸ್.ಸಿ ಪಠ್ಯಕ್ರಮದ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 300 ವಿದ್ಯಾರ್ಥಿಗಳು ಸೇರಿ ಒಟ್ಟು 1,259 ವಿದ್ಯಾರ್ಥಿಗಳು ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಜಿಲ್ಲೆಯ 5 ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 6 ರಿಂದ 10ನೇ ತರಗತಿಯವರೆಗೆ ರಾಜ್ಯ ಪಠ್ಯಕ್ರಮದಡಿ ಒಟ್ಟು 634 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

1 ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು, 1 ಉನ್ನತೀಕರಣಗೊಂಡ ಮೌಲಾನಾ ಆಜಾದ್ ಮಾದರಿ ಕಾಲೇಜು ಹಾಗೂ 1 ವಕ್ಫ್ ಮಹಿಳಾ ಪದವಿ ಪೂರ್ವ ಕಾಲೇಜುಗಳು ಕಾರ್ಯನಿರ್ವಹಿಸುತ್ತಿದ್ದು, ಒಟ್ಟು 286 ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 10 ವಿದ್ಯಾರ್ಥಿನಿಲಯಗಳಲ್ಲಿ ಪ್ರಥಮ ಪಿಯುಸಿಯಿಂದ ಸ್ನಾತಕೋತ್ತರ ಪದವಿವರೆಗಿನ ಒಟ್ಟು 725 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯಗಳಿಗಾಗಿ ಒಟ್ಟು ರೂ.20 ಲಕ್ಷ ಅನುದಾನ ಮಂಜೂರು ಮಾಡಲಾಗಿದೆ.

2025–26ನೇ ಸಾಲಿನಲ್ಲಿ ವಸತಿಯುತ ಮದರಸದಲ್ಲಿ ಧಾರ್ಮಿಕ ಶಿಕ್ಷಣದೊಂದಿಗೆ ಔಪಚಾರಿಕ ಶಿಕ್ಷಣ ನೀಡಲು ಒಂದು ಮದರಸ ಸಂಸ್ಥೆಗೆ ರೂ.50 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದೆ.

*ಸಮುದಾಯ ಭವನ ಮತ್ತು ಮೂಲಸೌಕರ್ಯ ಅಭಿವೃದ್ಧಿ:*

ಜಿಲ್ಲೆಯಲ್ಲಿ ಶಾದಿಮಹಲ್ ನಿರ್ಮಾಣ ಕಾಮಗಾರಿ ಯೋಜನೆಯಡಿ ಒಟ್ಟು 17 ಶಾದಿಮಹಲ್, ಸಮುದಾಯ ಭವನಗಳ ನಿರ್ಮಾಣಕ್ಕಾಗಿ ಒಟ್ಟು ರೂ.12 ಕೋಟಿ ಅನುದಾನ ಮಂಜೂರಾಗಿದೆ. 2 ಬಹುಪಯೋಗಿ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ಒಟ್ಟು ರೂ.3 ಕೋಟಿ ಅನುದಾನ ಒದಗಿಸಲಾಗಿದೆ. ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಒಟ್ಟು ರೂ.80.03 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ.

ಕಾಲೋನಿಗಳ ಸಮಗ್ರ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಗಳ ಯೋಜನೆಯಡಿ 2023–24ನೇ ಸಾಲಿನಲ್ಲಿ ರೂ.25 ಕೋಟಿ ಹಾಗೂ 2024–25ನೇ ಸಾಲಿನಲ್ಲಿ ರೂ.19.9 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ.

ಈ ಎಲ್ಲಾ ಯೋಜನೆಗಳ ಮೂಲಕ ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಸಬಲೀಕರಣಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande