
ಬೆಂಗಳೂರು, 07 ನವೆಂಬರ್ (ಹಿ.ಸ.):
ಪುಲಕೇಶಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಸದಿರುವುದು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ನಗರಕ್ಕೆ ಸಮರ್ಪಕ ಮೂಲಸೌಕರ್ಯ ಒದಗಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಬೆಲೆ ಏರಿಕೆ ಮಾಡುವ ಮೂಲಕವೇ ಹಣಕಾಸಿನ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.
ಪುಲಕೇಶಿ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಸುಮಾರು 250 ಕೋಟಿ ರೂ.ಗೂ ಅಧಿಕ ತೆರಿಗೆ ಹಣ ಲೂಟಿಯಾಗಿದೆ. ಆದರೆ, ಕ್ಷೇತ್ರದಲ್ಲಿ ಯಾವುದೇ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಿಲ್ಲ ಎಂದು ದೂರಿದರು.
ಗ್ರೇಟರ್ ಬೆಂಗಳೂರು ಜನತಾದಳದ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.