ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸಬೇಡಿ: ಸರ್ಕಾರಕ್ಕೆ ವಿಶ್ವ ಹಿಂದೂ ಪರಿಷತ್ ಆಗ್ರಹ
ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆ ದುರ್ಬಲಗೊಳಿಸದಂತೆ ಮನವಿ; ಗೋಹತ್ಯೆ ನಿಷೇಧ ಕಾಯ್ದೆಯನ್ನೂ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಒತ್ತಾಯ
ವಿ ಎಚ್ ಪಿ ಪತ್ರ


ಬೆಂಗಳೂರು, 07 ನವೆಂಬರ್ (ಹಿ.ಸ.):

ಕರ್ನಾಟಕದ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆ-2022 (ಮತಾಂತರ ನಿಷೇಧ ಕಾಯ್ದೆ)ಯನ್ನು ಯಾವುದೇ ಕಾರಣಕ್ಕೂ ರದ್ದುಗೊಳಿಸಬಾರದು ಅಥವಾ ದುರ್ಬಲಗೊಳಿಸಬಾರದು ಎಂದು ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಕರ್ನಾಟಕ ದಕ್ಷಿಣ ಘಟಕ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಈ ಸಂಬಂಧ ಮುಖ್ಯಮಂತ್ರಿಗಳು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ವಿಶ್ವ ಹಿಂದೂ ಪರಿಷತ್, ಕಾಯ್ದೆ ರದ್ದುಗೊಳಿಸುವಂತೆ ಆರ್ಚ್‌ಬಿಷಪ್ ಪೀಟರ್ ಮಚಾದೊ ಸೇರಿದಂತೆ ಕೆಲವು ಹಿತಾಸಕ್ತಿಗಳು ಮಾಡುತ್ತಿರುವ ಒತ್ತಾಯವನ್ನು ಸರ್ಕಾರ ಸ್ಪಷ್ಟವಾಗಿ ತಿರಸ್ಕರಿಸಬೇಕು ಎಂದು ಮನವಿ ಮಾಡಿದೆ.

ಮತಾಂತರ ನಿಷೇಧ ಕಾಯ್ದೆಯು ಯಾವುದೇ ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿಕೊಂಡಿಲ್ಲ. ಬದಲಾಗಿ ಬಲವಂತ, ವಂಚನೆ, ಆಮಿಷ ಹಾಗೂ ದಾರಿ ತಪ್ಪಿಸುವ ಮೂಲಕ ನಡೆಯುವ ಕಾನೂನುಬಾಹಿರ ಮತಾಂತರಗಳನ್ನು ತಡೆಯುವ ಉದ್ದೇಶ ಹೊಂದಿದೆ. ಇಂತಹ ಅಕ್ರಮಗಳನ್ನು ತಡೆಯುವ ಕಾನೂನಿಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ವಿಹೆಚ್‌ಪಿ ತನ್ನ ಪತ್ರದಲ್ಲಿ ತಿಳಿಸಿದೆ.

ಮತಾಂತರ ನಿಷೇಧ ಕಾಯ್ದೆಯನ್ನು ರಾಜಕೀಯ ದೃಷ್ಟಿಕೋನದಿಂದ ಮಾತ್ರ ನೋಡುವುದು ಸರಿಯಲ್ಲ. ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿ ವೀರಭದ್ರ ಸಿಂಗ್ ನೇತೃತ್ವದ ಸರ್ಕಾರ 2006ರಲ್ಲಿ ಕಟ್ಟುನಿಟ್ಟಿನ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿತ್ತು. ಅರುಣಾಚಲ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಒಡಿಶಾ ರಾಜ್ಯಗಳಲ್ಲಿಯೂ ವಿವಿಧ ಸರ್ಕಾರಗಳು ಇಂತಹ ಕಾಯ್ದೆಗಳನ್ನು ಮುಂದುವರಿಸಿಕೊಂಡು ಬಂದಿವೆ. ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ಪಕ್ಷಗಳ ಪ್ರಣಾಳಿಕೆಗಿಂತಲೂ ಮಿಗಿಲಾದ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಪ್ರತಿಪಾದಿಸಿದೆ.

1977ರ ರೆವರೆಂಡ್ ಸ್ಟೇನಿಸ್ಲಾಸ್ ಮತ್ತು ಮಧ್ಯಪ್ರದೇಶ ಸರ್ಕಾರ ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಉಲ್ಲೇಖಿಸಿರುವ ವಿಹೆಚ್‌ಪಿ, ಸಂವಿಧಾನದ 25ನೇ ವಿಧಿಯಡಿ ಧರ್ಮ ಪ್ರಚಾರದ ಹಕ್ಕು ಇರುವುದರಿಂದ ಮತ್ತೊಬ್ಬರನ್ನು ಬಲವಂತವಾಗಿ ಮತಾಂತರಿಸುವ ಹಕ್ಕು ದೊರೆಯುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ ಎಂದು ತಿಳಿಸಿದೆ.

ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳೇ ಅಂತಿಮವಲ್ಲ. ಸರ್ಕಾರವು ಸಂವಿಧಾನ ಮತ್ತು ಕಾನೂನಿನ ನಿಯಮಗಳಿಗೆ ಬದ್ಧವಾಗಿರಬೇಕು. ಪ್ರಣಾಳಿಕೆಯಲ್ಲಿನ ಭರವಸೆಗಳಿಗಾಗಿ ಸಮಾಜದ ಶಾಂತಿ ಕದಡುವ ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ಒತ್ತಾಯಿಸಿದೆ.

ಕರ್ನಾಟಕದ ಸಾಂಸ್ಕೃತಿಕ ಅನನ್ಯತೆ ಹಾಗೂ ಕೋಮು ಸೌಹಾರ್ದತೆ ಕಾಪಾಡುವ ದೃಷ್ಟಿಯಿಂದ ಆರ್ಚ್‌ಬಿಷಪ್ ಪೀಟರ್ ಮಚಾದೊ ಮತ್ತು ಅವರ ಬಳಗದ ಬೇಡಿಕೆಗಳನ್ನು ಸರ್ಕಾರ ತಕ್ಷಣ ತಿರಸ್ಕರಿಸಬೇಕು. ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆ-2022 ಮತ್ತು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆ-2020 (ಗೋಹತ್ಯೆ ನಿಷೇಧ ಕಾಯ್ದೆ) ಎರಡನ್ನೂ ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಕರ್ನಾಟಕ ಘಟಕದ ಪ್ರಾಂತ ಕಾರ್ಯದರ್ಶಿ ಬಿ.ಇ. ಸುರೇಶ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande