ದೀಪಾವಳಿ ಹಬ್ಬದ ವೇಳೆ ಖಾಸಗಿ ಬಸ್ ದರ ಮೂರು ಪಟ್ಟು ಹೆಚ್ಚಳ
ಬೆಂಗಳೂರು, 07 ನವೆಂಬರ್ (ಹಿ.ಸ.): ಬೆಳಕಿನ ಹಬ್ಬ ದೀಪಾವಳಿ ಸಂಭ್ರಮಕ್ಕೆ ಸಿದ್ಧತೆ ಜೋರಾಗಿರುವ ಬೆನ್ನಲ್ಲೇ, ತಮ್ಮ ತಮ್ಮ ಊರುಗಳಿಗೆ ತೆರಳಲು ಸಜ್ಜಾಗಿರುವ ಪ್ರಯಾಣಿಕರಿಗೆ ಬಸ್ ಪ್ರಯಾಣದ ದರ ಏರಿಕೆ ಬಿಸಿ ತಟ್ಟಿದೆ. ಹಬ್ಬದ ಸಾಲು ಸಾಲು ರಜೆಗಳನ್ನು ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್ ಮಾಲೀಕರು ಟಿಕೆಟ್
diwali-bus-fare-hike-private-buses-charge-triple-fares-ksrtc-operates-2600-extra-buses


ಬೆಂಗಳೂರು, 07 ನವೆಂಬರ್ (ಹಿ.ಸ.):

ಬೆಳಕಿನ ಹಬ್ಬ ದೀಪಾವಳಿ ಸಂಭ್ರಮಕ್ಕೆ ಸಿದ್ಧತೆ ಜೋರಾಗಿರುವ ಬೆನ್ನಲ್ಲೇ, ತಮ್ಮ ತಮ್ಮ ಊರುಗಳಿಗೆ ತೆರಳಲು ಸಜ್ಜಾಗಿರುವ ಪ್ರಯಾಣಿಕರಿಗೆ ಬಸ್ ಪ್ರಯಾಣದ ದರ ಏರಿಕೆ ಬಿಸಿ ತಟ್ಟಿದೆ.

ಹಬ್ಬದ ಸಾಲು ಸಾಲು ರಜೆಗಳನ್ನು ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್ ಮಾಲೀಕರು ಟಿಕೆಟ್ ದರವನ್ನು ಎರಡರಿಂದ ಮೂರು ಪಟ್ಟು ಹೆಚ್ಚಳ ಮಾಡಿದ್ದು, ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ.

ಮತ್ತೊಂದೆಡೆ, ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 2,600 ಹೆಚ್ಚುವರಿ ಬಸ್ಗಳನ್ನು ನಿಯೋಜಿಸಿದೆ.

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಾವಿರಾರು ಜನರು ಊರಿನತ್ತ ಪ್ರಯಾಣ ಆರಂಭಿಸಿದ್ದಾರೆ. ನಗರದ ಪ್ರಮುಖ ಬಸ್ ನಿಲ್ದಾಣವಾದ ಮೆಜೆಸ್ಟಿಕ್ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದ್ದು, ಬಸ್ಗಳನ್ನು ಹತ್ತಲು ಜನರು ಪರದಾಡುವ ದೃಶ್ಯ ಕಂಡುಬಂದಿದೆ.

2,600 ಹೆಚ್ಚುವರಿ ಬಸ್ಗಳ ವ್ಯವಸ್ಥೆ

ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಕೆಎಸ್ಆರ್ಟಿಸಿ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಿದೆ.

ಈ ಕುರಿತು ಮಾಹಿತಿ ನೀಡಿರುವ ಕೆಎಸ್ಆರ್ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕ ಪ್ರಭಾಕರ ರೆಡ್ಡಿ, ಇಂದಿನಿಂದ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಅಂತರರಾಜ್ಯದ ಪ್ರಮುಖ ಸ್ಥಳಗಳಿಗೆ ಒಟ್ಟು 2,600 ಹೆಚ್ಚುವರಿ ವಾಹನಗಳ ವ್ಯವಸ್ಥೆ ಮಾಡಲಾಗಿದೆ.

ಈ ಬಸ್ಗಳು ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆಯ ಸ್ಯಾಟ್ಲೈಟ್ ಬಸ್ ನಿಲ್ದಾಣ ಹಾಗೂ ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣಗಳಿಂದ ಕಾರ್ಯಾಚರಣೆ ನಡೆಸಲಿವೆ ಎಂದು ತಿಳಿಸಿದ್ದಾರೆ.

ಹೆಚ್ಚುವರಿ ಬಸ್ಗಳ ನಿಯೋಜನೆಯಿಂದ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಸಂಚಾರ ಸುಗಮವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಖಾಸಗಿ ಬಸ್ಗಳಿಂದ ಟಿಕೆಟ್ ದರದಲ್ಲಿ ಭಾರೀ ಏರಿಕೆ

ಇನ್ನೊಂದೆಡೆ, ಹಬ್ಬದ ರಜೆಯ ಲಾಭ ಪಡೆಯಲು ಮುಂದಾಗಿರುವ ಖಾಸಗಿ ಬಸ್ ನಿರ್ವಾಹಕರು ಸಾಮಾನ್ಯ ದಿನಗಳಿಗಿಂತ ಎರಡರಿಂದ ಮೂರು ಪಟ್ಟು ಹೆಚ್ಚಿನ ದರ ವಿಧಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರು-ಮಂಗಳೂರು, ಬೆಂಗಳೂರು-ಹುಬ್ಬಳ್ಳಿ, ಬೆಂಗಳೂರು-ಧಾರವಾಡ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಟಿಕೆಟ್ ದರ ಗಗನಕ್ಕೇರಿದೆ.

ಈಗಾಗಲೇ ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರದಲ್ಲಿ ಶೇ.23ರಷ್ಟು ಹೆಚ್ಚಳವಾಗಿರುವುದರಿಂದ ಸಾರ್ವಜನಿಕರು ಸಂಕಷ್ಟ ಎದುರಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಖಾಸಗಿ ಬಸ್ಗಳ ದರ ಏರಿಕೆಯೂ ಪ್ರಯಾಣಿಕರಿಗೆ ಮತ್ತಷ್ಟು ಹೊರೆಯಾಗಿದೆ.

ಹಬ್ಬದ ಸಂದರ್ಭದಲ್ಲಿ ಊರಿಗೆ ತೆರಳಲೇಬೇಕಾದ ಅನಿವಾರ್ಯತೆಯನ್ನು ಖಾಸಗಿ ಬಸ್ ಮಾಲೀಕರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ, ದೀಪಾವಳಿ ಹಬ್ಬವನ್ನು ಕುಟುಂಬದವರೊಂದಿಗೆ ಆಚರಿಸಲು ಊರಿಗೆ ಹೊರಟಿರುವ ಜನರಿಗೆ ಈ ಬಾರಿ ಪ್ರಯಾಣ ವೆಚ್ಚವೇ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ಗಳ ಅತಿಯಾದ ದರ ಏರಿಕೆಗೆ ಕಡಿವಾಣ ಹಾಕಲು ಸಂಬಂಧಪಟ್ಟ ಸಾರಿಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಸಾರ್ವಜನಿಕರಿಂದ ಕೇಳಿಬಂದಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande