ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ: 5 ಲಕ್ಷ ರೂ.ವರೆಗೆ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿಗೆ ಗ್ರಾಮ ಪಂಚಾಯಿತಿಗಳಿಗೆ ಅವಕಾಶ
ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಗ್ರಾಮೀಣಾಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 'ವಿಬಿ-ಜಿ ರಾಮ್ ಜಿ' ಯೋಜನೆಯಡಿ ಪ್ರತಿ ಕಾಮಗಾರಿಗೆ 5 ಲಕ್ಷ ರೂ.ವರೆಗೆ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿಸಲು ಗ್ರಾಮ ಪಂಚಾಯಿತಿಗಳಿಗೆ ಒಂದು ವರ್ಷದ ಅವಧಿಗೆ ವಿನಾಯಿತಿ
gram-panchayats-allowed-to-purchase-materials-without-tender-up-to-rs-5-lakh


ಬೆಂಗಳೂರು, 07 ನವೆಂಬರ್ (ಹಿ.ಸ):

ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

'ವಿಬಿ-ಜಿ ರಾಮ್ ಜಿ' ಯೋಜನೆಯಡಿ ಅನುಮೋದನೆಗೊಂಡಿರುವ ಪ್ರತಿ ಕಾಮಗಾರಿಗೆ 5 ಲಕ್ಷ ರೂಪಾಯಿಗಳವರೆಗೆ ಟೆಂಡರ್ ಕರೆಯದೆಯೇ ಸಾಮಗ್ರಿಗಳನ್ನು ನೇರವಾಗಿ ಖರೀದಿಸಲು ಗ್ರಾಮ ಪಂಚಾಯಿತಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದೆ.

ನವೆಂಬರ್ 2ರಂದು ಹೊರಡಿಸಿರುವ ಆದೇಶದಂತೆ, ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಕಾಯಿದೆ-1999ರ ಸೆಕ್ಷನ್ 4(ಜಿ) ಅಡಿಯಲ್ಲಿ ಒಂದು ವರ್ಷದ ಅವಧಿಗೆ ಈ ವಿನಾಯಿತಿ ನೀಡಲಾಗಿದೆ. ರಾಜ್ಯದ ಸುಮಾರು 6 ಸಾವಿರ ಗ್ರಾಮ ಪಂಚಾಯಿತಿಗಳಿಗೆ ಈ ಆದೇಶ ಅನ್ವಯವಾಗಲಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯ ಕಾಮಗಾರಿಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವುದು, ಸ್ಥಳೀಯವಾಗಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಹಾಗೂ ಬರಗಾಲದ ಹಿನ್ನೆಲೆಯಲ್ಲಿ ಉದ್ಯೋಗ ಅರಸಿ ಗ್ರಾಮೀಣ ಜನರು ಬೇರೆಡೆಗೆ ವಲಸೆ ಹೋಗುವುದನ್ನು ತಡೆಯುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ಸರ್ಕಾರ ತಿಳಿಸಿದೆ.

ಸಾಮಗ್ರಿ ಖರೀದಿಗೆ ಮಾತ್ರ ವಿನಾಯಿತಿ

ಸರ್ಕಾರದ ಆದೇಶದ ಪ್ರಕಾರ, ಈ ವಿನಾಯಿತಿ ಕೇವಲ ಕಾಮಗಾರಿಗಳಿಗೆ ಅಗತ್ಯವಿರುವ ಸಾಮಗ್ರಿಗಳ ಖರೀದಿಗೆ ಮಾತ್ರ ಸೀಮಿತವಾಗಿದೆ. ಗುತ್ತಿಗೆದಾರರನ್ನು ನೇಮಿಸಲು ಅಥವಾ ಕಾಮಗಾರಿಗಳ ನಿರ್ವಹಣೆಗೆ ಗುತ್ತಿಗೆ ನೀಡಲು ಈ ಅವಕಾಶವನ್ನು ಬಳಸುವಂತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಅನ್ವಯವಾಗುವ ತೆರಿಗೆ ಮತ್ತು ಇತರ ಶುಲ್ಕಗಳು ಸೇರಿದಂತೆ ಪ್ರತಿ ಕಾಮಗಾರಿಗೆ ಸಾಮಗ್ರಿಗಳ ಒಟ್ಟು ಖರೀದಿ ಮೌಲ್ಯ 5 ಲಕ್ಷ ರೂಪಾಯಿಗಳನ್ನು ಮೀರಬಾರದು. ಖರೀದಿಸುವ ಸಾಮಗ್ರಿಗಳ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳುವುದರ ಜತೆಗೆ ಮಾರುಕಟ್ಟೆಯಲ್ಲಿ ಲಭ್ಯವಿರುವ ಸಮಂಜಸವಾದ ದರಗಳಲ್ಲಿಯೇ ಖರೀದಿ ನಡೆಸಬೇಕು ಎಂದು ಸರ್ಕಾರ ಸೂಚಿಸಿದೆ.

ದಾಖಲೆಗಳ ನಿರ್ವಹಣೆ ಕಡ್ಡಾಯ

ಖರೀದಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಗಳಿಗೆ ಹಲವು ಷರತ್ತುಗಳನ್ನು ವಿಧಿಸಲಾಗಿದೆ.

ಸಾಮಗ್ರಿಗಳ ಬೆಲೆ ಹೋಲಿಕೆ, ಖರೀದಿ ನಿರ್ಧಾರ, ಸರಬರಾಜು ವಿವರ, ಗುಣಮಟ್ಟ ಪರಿಶೀಲನೆ, ಬಿಲ್ಗಳು ಹಾಗೂ ಪಾವತಿಗಳಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಕಡ್ಡಾಯವಾಗಿ ನಿರ್ವಹಿಸಬೇಕು.

ಅಲ್ಲದೆ, ಈ ದಾಖಲೆಗಳನ್ನು ಲೆಕ್ಕಪರಿಶೋಧನೆಗೆ ಲಭ್ಯವಾಗುವಂತೆ ಇರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವಲಸೆ ತಡೆಗೆ ಸರ್ಕಾರದ ಕ್ರಮ

ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಮುಂದುವರಿದಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ಸ್ಥಳೀಯವಾಗಿಯೇ ಉದ್ಯೋಗ ಒದಗಿಸುವ ಉದ್ದೇಶದಿಂದ 'ವಿಬಿ-ಜಿ ರಾಮ್ ಜಿ' ಯೋಜನೆಯಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ಮುಂದಾಗಿದೆ.

ಸಾಮಗ್ರಿಗಳ ಖರೀದಿಗೆ ಸಂಬಂಧಿಸಿದ ಆಡಳಿತಾತ್ಮಕ ವಿಳಂಬವನ್ನು ತಪ್ಪಿಸಿ, ಅನುಮೋದಿತ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಈ ವಿನಾಯಿತಿ ಸಹಕಾರಿಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೂಲಗಳು ತಿಳಿಸಿವೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande