ಎಥೆನಾಲ್ ಮಿಶ್ರಣ: 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ:ಡಿ.ಕೆ. ಶಿವಕುಮಾರ್
ಬೆಂಗಳೂರು, 08 ನವೆಂಬರ್ (ಹಿ.ಸ.): ವಾಹನ ಇಂಧನದಲ್ಲಿ ಎಥೆನಾಲ್ ಮಿಶ್ರಣದ ಪ್ರಮಾಣ ಹೆಚ್ಚಳದಿಂದ ಎಂಜಿನ್ ಕಾರ್ಯನಿರ್ವಹಣೆಯಲ್ಲಿ ಸಮಸ್ಯೆ ಉಂಟಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ರಾಜ್ಯದ 67 ಕಡೆ ಪೆಟ್ರೋಲ್ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ
ಸಿಎಂ ಫೈಲ್ ಪೋಟೋ


ಬೆಂಗಳೂರು, 08 ನವೆಂಬರ್ (ಹಿ.ಸ.):

ವಾಹನ ಇಂಧನದಲ್ಲಿ ಎಥೆನಾಲ್ ಮಿಶ್ರಣದ ಪ್ರಮಾಣ ಹೆಚ್ಚಳದಿಂದ ಎಂಜಿನ್ ಕಾರ್ಯನಿರ್ವಹಣೆಯಲ್ಲಿ ಸಮಸ್ಯೆ ಉಂಟಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ರಾಜ್ಯದ 67 ಕಡೆ ಪೆಟ್ರೋಲ್ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಕುರಿತು ಸೋಮವಾರ ಸಂಬಂಧಪಟ್ಟ ಸಚಿವರು ಅಧಿಕೃತವಾಗಿ ಪತ್ರಿಕಾಗೋಷ್ಠಿ ನಡೆಸಿ ಪರಿಶೀಲನಾ ವರದಿ ಹಾಗೂ ಮುಂದಿನ ಕ್ರಮಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದರು.

ಪೆಟ್ರೋಲ್‌ನಲ್ಲಿ ಶೇ.31.5ರಷ್ಟು ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ದೂರುಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಸಚಿವರಿಗೆ ಅಗತ್ಯ ಸೂಚನೆ ನೀಡಲಾಗಿದ್ದು, ಕೇಂದ್ರ ಸರ್ಕಾರಕ್ಕೂ ಮಾಹಿತಿ ರವಾನಿಸಲಾಗಿದೆ. ವಾಹನಗಳ ಮೈಲೇಜ್ ಕಡಿಮೆಯಾಗುವುದು, ನಿರೀಕ್ಷಿತ ದೂರ ಕ್ರಮಿಸದಿರುವುದು ಹಾಗೂ ಚಲಿಸುತ್ತಿರುವಾಗಲೇ ಎಂಜಿನ್ ಸ್ಥಗಿತಗೊಳ್ಳುವುದು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಸಾವಿರಾರು ವಾಹನ ಸವಾರರು ದೂರು ನೀಡಿದ್ದಾರೆ ಎಂದು ತಿಳಿಸಿದರು.

ವಿತರಣಾ ಹಂತದಲ್ಲೂ ಪರಿಶೀಲನೆ

ಪೆಟ್ರೋಲ್ ಬಂಕ್‌ಗಳಲ್ಲಿ ಮಾತ್ರವಲ್ಲದೆ, ಎಥೆನಾಲ್ ಮಿಶ್ರಣ ಮಾಡುವ ಮತ್ತು ಇಂಧನ ವಿತರಿಸುವ ಹಂತದಲ್ಲೂ ಪರಿಶೀಲನೆ ನಡೆಸಲಾಗಿದೆ. ಎಲ್ಲಿ ಮತ್ತು ಹೇಗೆ ಮಿಶ್ರಣ ಮಾಡಲಾಗುತ್ತಿದೆ ಎಂಬುದಕ್ಕೆ ಸಂಬಂಧಿಸಿದ ದಾಖಲೆಗಳನ್ನೂ ಸಂಗ್ರಹಿಸಲಾಗಿದೆ. ಸಚಿವರು ಈ ಕುರಿತು ಸಮಗ್ರ ವರದಿ ಬಿಡುಗಡೆ ಮಾಡಲಿದ್ದಾರೆ ಎಂದರು.

ಕೇಂದ್ರ ಸರ್ಕಾರ ಈ ವಿಚಾರದಿಂದ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ವಾಹನಗಳ ಕಾರ್ಯಕ್ಷಮತೆ, ಇಂಧನದ ಗುಣಮಟ್ಟ ಹಾಗೂ ಜನರ ಸುರಕ್ಷತೆ ಮುಖ್ಯ. ಕಡಿಮೆ ಬೆಲೆಗೆ ಎಥೆನಾಲ್ ದೊರೆಯುತ್ತದೆ ಎಂಬ ಕಾರಣಕ್ಕೆ ಲಾಭದ ಉದ್ದೇಶದಿಂದ ಮಿಶ್ರಣದ ಪ್ರಮಾಣ ಹೆಚ್ಚಿಸುವುದು ಸರಿಯಲ್ಲ. ಇದರಿಂದ ಜನರಿಗೆ ತೊಂದರೆಯಾಗಬಾರದು ಎಂದು ಹೇಳಿದರು.

ಈ ವಿಚಾರ ಇಡೀ ದೇಶದ ವಾಹನ ಸವಾರರಲ್ಲಿ ಆತಂಕ ಮೂಡಿಸಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಇಂತಹ ಅಪಾಯಕಾರಿ ಪರಿಸ್ಥಿತಿಯನ್ನು ನಾವು ಖಂಡಿಸುತ್ತೇವೆ ಎಂದು ತಿಳಿಸಿದರು.

ಇದೇ ವೇಳೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಹಾಗೂ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಈ ವಿಚಾರವಾಗಿ ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ, ಜನರ ಹಿತಾಸಕ್ತಿಗೆ ಸಂಬಂಧಿಸಿದ ವಿಷಯದಲ್ಲಿ ಎಲ್ಲರೂ ಧ್ವನಿ ಎತ್ತಬೇಕು ಎಂದು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande