ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ವಿರುದ್ದ ಮಂಡ್ಯದಲ್ಲಿ ಆಕ್ರೋಶ
ಮಂಡ್ಯ, 08 ನವೆಂಬರ್ (ಹಿ.ಸ.): ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶವನ್ನು ವಿರೋಧಿಸಿ ಮಂಡ್ಯದಲ್ಲಿ ಕನ್ನಡಪರ ಹಾಗೂ ರೈತಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ನಗರದ ಸಂಜಯ ವೃತ್ತದಲ್ಲಿ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ
Mandya-Cauvery-Protest-CWMA-Order-Tamil-Nadu-Water-Release


ಮಂಡ್ಯ, 08 ನವೆಂಬರ್ (ಹಿ.ಸ.):

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶವನ್ನು ವಿರೋಧಿಸಿ ಮಂಡ್ಯದಲ್ಲಿ ಕನ್ನಡಪರ ಹಾಗೂ ರೈತಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ನಗರದ ಸಂಜಯ ವೃತ್ತದಲ್ಲಿ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಹಳೆ ಬೆಂಗಳೂರು-ಮೈಸೂರು ಹೆದ್ದಾರಿಯನ್ನು ತಡೆದು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಿಂದಾಗಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಟ್ರಾಫಿಕ್ ಜಾಮ್ ಉಂಟಾಯಿತು.

ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗುತ್ತಿರುವ ನಡುವೆಯೂ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿರುವುದು ಖಂಡನೀಯ. ಪ್ರಾಧಿಕಾರಗಳು ವಾಸ್ತವ ಪರಿಸ್ಥಿತಿಯನ್ನು ಅರಿಯದೆ ಆದೇಶ ನೀಡುತ್ತಿವೆ.

ಈಗಾಗಲೇ ಒಂಬತ್ತು ಬಾರಿ ರಾಜ್ಯದ ವಿರುದ್ಧವೇ ತೀರ್ಪುಗಳು ಬಂದಿವೆ. ನೀರು ಬಿಡುವುದಿಲ್ಲ ಎಂದು ಸರ್ಕಾರ ಹೇಳುತ್ತಿದ್ದರೂ ನಿರಂತರವಾಗಿ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ರೈತರ ಬದುಕಿನಲ್ಲಿ ಕತ್ತಲು ಆವರಿಸಿದೆ. ರೈತರ ಹಿತಾಸಕ್ತಿ ಹಾಗೂ ರಾಜ್ಯದ ಜನರ ಕುಡಿಯುವ ನೀರಿನ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ನಿರ್ಧಾರ ಕೈಗೊಳ್ಳಬೇಕು.

ಪ್ರಾಧಿಕಾರದ ಆದೇಶಗಳನ್ನು ಸರ್ಕಾರ ಪಾಲಿಸಬಾರದು. ಇದೇ ರೀತಿ ತಮಿಳುನಾಡಿಗೆ ನೀರು ಹರಿಸಿದರೆ ಮುಂದಿನ ದಿನಗಳಲ್ಲಿ ರಾಜ್ಯದ ಜನರಿಗೆ ಕುಡಿಯುವ ನೀರಿಗೂ ಸಂಕಷ್ಟ ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್, ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಕೊರತೆ ಇದ್ದರೂ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿರುವುದು ರಾಜ್ಯದ ರೈತರಿಗೆ ಮಾಡುತ್ತಿರುವ ಅನ್ಯಾಯವಾಗಿದೆ.

ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಧಿಕಾರದ ಆದೇಶವನ್ನು ವಿರೋಧಿಸಿ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ರೈತ ಮುಖಂಡ ಶಿವಳ್ಳಿ ಚಂದ್ರಶೇಖರ್ ಮಾತನಾಡಿ, ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ವಾಸ್ತವ ಸ್ಥಿತಿಯನ್ನು ಪರಿಗಣಿಸದೆ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿರುವಾಗ ತಮಿಳುನಾಡಿಗೆ ನೀರು ಹರಿಸಿದರೆ ಕೃಷಿ ಚಟುವಟಿಕೆ ಮಾತ್ರವಲ್ಲದೆ ಕುಡಿಯುವ ನೀರಿಗೂ ತೊಂದರೆಯಾಗಲಿದೆ.

ರೈತರ ಹಿತದೃಷ್ಟಿಯಿಂದ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕನ್ನಡಪರ ಹಾಗೂ ರೈತಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande