
ಕಲಬುರಗಿ, 09 ನವೆಂಬರ್ (ಹಿ.ಸ.):
ಕಲ್ಯಾಣ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಗಾಣಗಾಪುರದ ಶ್ರೀ ದತ್ತಾತ್ರೇಯ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮಹತ್ವದ ಯೋಜನೆ ರೂಪಿಸಿದೆ. ಒಟ್ಟು ₹250 ಕೋಟಿ ವೆಚ್ಚದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಲಾಗಿದ್ದು, ಮೊದಲ ಹಂತದಲ್ಲಿ ₹50 ಕೋಟಿ ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಮೊದಲ ಹಂತದ ಅಭಿವೃದ್ಧಿ ಕಾಮಗಾರಿಗಳಿಗೆ ವಿವರವಾದ ಯೋಜನಾ ವರದಿ ಸಿದ್ಧಪಡಿಸಲಾಗಿದೆ. ಸಚಿವ ಸಂಪುಟದ ಅನುಮೋದನೆ ಪ್ರಕ್ರಿಯೆ ಪೂರ್ಣಗೊಳಿಸಿ ಶೀಘ್ರದಲ್ಲೇ ಕಾಮಗಾರಿಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಮೊದಲ ಹಂತದಲ್ಲಿ ಆರು ಪ್ರಮುಖ ಕಾಮಗಾರಿಗಳು
ಮೊದಲ ಹಂತದಲ್ಲಿ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗೆ ಆರು ಪ್ರಮುಖ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ.
* ಸಂಗಮ ಘಾಟ್ ಅಭಿವೃದ್ಧಿ – ₹17.12 ಕೋಟಿ
* ಪಾಪವಿನಾಶ ತೀರ್ಥ ಅಭಿವೃದ್ಧಿ – ₹12.50 ಕೋಟಿ
* ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಪಾದಚಾರಿ ಮಾರ್ಗ – ₹6.50 ಕೋಟಿ
* ವಾಹನ ನಿಲುಗಡೆ ಮತ್ತು ಸಾರಿಗೆ ವ್ಯವಸ್ಥೆ – ₹9.10 ಕೋಟಿ
* ಬಸ್ ನಿಲ್ದಾಣದಿಂದ ದೇವಸ್ಥಾನಕ್ಕೆ ಪಾದಚಾರಿ ಮಾರ್ಗ – ₹52 ಲಕ್ಷ
* ದೇವಸ್ಥಾನ ಸಂಕೀರ್ಣ ಅಭಿವೃದ್ಧಿ – ₹4.25 ಕೋಟಿ
ಯಾತ್ರಿಕರಿಗೆ ಆಧುನಿಕ ಸೌಲಭ್ಯಗಳು
ಯೋಜನೆಯಡಿ 860 ಕಾರುಗಳು ಮತ್ತು 500 ದ್ವಿಚಕ್ರ ವಾಹನಗಳನ್ನು ನಿಲುಗಡೆ ಮಾಡುವ ಸಾಮರ್ಥ್ಯದ ಪಾರ್ಕಿಂಗ್ ವ್ಯವಸ್ಥೆ ನಿರ್ಮಿಸಲಾಗುತ್ತದೆ. ಸಂಗಮ ಘಾಟ್‌ನಲ್ಲಿ 40 ವಾಣಿಜ್ಯ ಮಳಿಗೆಗಳನ್ನು ಸ್ಥಾಪಿಸಲಾಗುತ್ತದೆ. ಪಾಪವಿನಾಶ ತೀರ್ಥದಲ್ಲಿ ತೇಲುವ ಜೆಟ್ಟಿ ಹಾಗೂ ಸುರಕ್ಷಿತ ಸ್ನಾನ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ದೇವಸ್ಥಾನದ ಮಾರ್ಗದಲ್ಲಿ 30 ಅಂಗಡಿಗಳು, ಮಾಹಿತಿ ಕೇಂದ್ರ ಮತ್ತು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ನಿರ್ಮಿಸಲಾಗುತ್ತದೆ. ಉದ್ಯಾನವನ, ಶೌಚಾಲಯ, ವಿಶ್ರಾಂತಿ ಸ್ಥಳಗಳು ಸೇರಿದಂತೆ ಯಾತ್ರಿಕರಿಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ.
ಅಂಗವಿಕಲರಿಗೆ ವಿಶೇಷ ಪ್ರವೇಶ ವ್ಯವಸ್ಥೆ ಕಲ್ಪಿಸುವುದರ ಜತೆಗೆ, ಭಕ್ತರ ಅನುಕೂಲಕ್ಕಾಗಿ ಪ್ರತ್ಯೇಕ ದರ್ಶನ ಪ್ರವೇಶ ಮತ್ತು ನಿರ್ಗಮನ ವ್ಯವಸ್ಥೆಯನ್ನೂ ರೂಪಿಸಲಾಗುತ್ತದೆ.
ನದಿ ತೀರದ ಸೌಂದರ್ಯೀಕರಣ, ಸುಸಜ್ಜಿತ ವಾಹನ ನಿಲುಗಡೆ ವ್ಯವಸ್ಥೆ ಹಾಗೂ ಆಧುನಿಕ ಮೂಲಸೌಕರ್ಯಗಳ ಮೂಲಕ ಗಾಣಗಾಪುರವನ್ನು ಪ್ರಮುಖ ಧಾರ್ಮಿಕ ಮತ್ತು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವುದು ಯೋಜನೆಯ ಉದ್ದೇಶವಾಗಿದೆ.
ಈ ಯೋಜನೆಯಿಂದ ಶ್ರೀಕ್ಷೇತ್ರಕ್ಕೆ ಆಗಮಿಸುವ ಭಕ್ತರು ಮತ್ತು ಪ್ರವಾಸಿಗರಿಗೆ ಹೆಚ್ಚಿನ ಅನುಕೂಲವಾಗುವುದರ ಜತೆಗೆ ಕಲಬುರಗಿ ಜಿಲ್ಲೆಯ ಆರ್ಥಿಕ ಚಟುವಟಿಕೆಗಳು ಹಾಗೂ ಪ್ರವಾಸೋದ್ಯಮಕ್ಕೂ ಉತ್ತೇಜನ ದೊರೆಯಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.