
ಬೆಂಗಳೂರು, 09 ನವೆಂಬರ್ (ಹಿ.ಸ.):
ವಿರೋಧ ಪಕ್ಷದ ನಾಯಕರ ಮನೆಗೆ ಚಾಕು, ಚೂರಿಗಳನ್ನು ಕಳುಹಿಸುವುದು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರ ನಿವಾಸಕ್ಕೆ ಪೋಸ್ಟರ್ ಅಂಟಿಸುವ ಮೂಲಕ ಗೂಂಡಾಗಿರಿ ನಡೆಸುವುದರಿಂದ ಬಿಜೆಪಿಯನ್ನು ಮಣಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆಯ ಪರಮಾವಧಿ ತಲುಪಿದೆ ಎಂದು ಆರೋಪಿಸಿದ್ದಾರೆ.
ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಮನೆಗೆ ಚಾಕು ಮತ್ತು ಚೂರಿಗಳನ್ನು ಕಳುಹಿಸಿರುವುದಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನಿವಾಸಕ್ಕೆ ಪೋಸ್ಟರ್ ಅಂಟಿಸಿ ಅವಮಾನಿಸಲು ಪ್ರಯತ್ನಿಸಲಾಗಿದೆ ಎಂದು ದೂರಿದ್ದಾರೆ.
ಗೂಂಡಾಗಳು ಮತ್ತು ಅಪರಾಧಿಗಳನ್ನು ಬಳಸಿಕೊಂಡು ಬಿಜೆಪಿಯನ್ನು ಬೆದರಿಸಬಹುದು, ಹೋರಾಟದಿಂದ ಹಿಂದೆ ಸರಿಸಬಹುದು ಎಂಬುದು ಕಾಂಗ್ರೆಸ್ ನಾಯಕರ ಭ್ರಮೆಯಷ್ಟೇ. ಇಂತಹ ಘಟನೆಗಳಿಂದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ಅವ್ಯವಹಾರಗಳ ವಿರುದ್ಧದ ತಮ್ಮ ಹೋರಾಟ ಮತ್ತಷ್ಟು ಬಲಗೊಳ್ಳಲಿದೆ. ತಾವು ಯಾವುದೇ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ನವರೇ ಬಿಜೆಪಿಯ ವಿರುದ್ಧ ಕದನಕ್ಕೆ ಇಳಿದಿದ್ದಾರೆ. ಆದರೆ ಬಿಜೆಪಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿಯೇ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ನೀಡಲಿದೆ. ಕಾಂಗ್ರೆಸ್ ಪಕ್ಷದ ಇಂತಹ ವರ್ತನೆಯನ್ನು ಜನರು ಗಮನಿಸುತ್ತಿದ್ದಾರೆ ಎಂದು ಸಿ.ಟಿ.ರವಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.