
ಮಂಡ್ಯ, 09 ನವೆಂಬರ್ (ಹಿ.ಸ.):
ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಮನೆಗೆ ಚಾಕು-ಚೂರಿಗಳನ್ನು ಪಾರ್ಸಲ್ ಮಾಡಿರುವ ಘಟನೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಮಂಡ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ನಗರದ ಸಂಜಯ ವೃತ್ತದಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಪ್ರತಿಭಟನೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಶಂಕರ್ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಶಂಕರ್, ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಗೂಂಡಾ ಸಂಸ್ಕೃತಿಯ ಆಡಳಿತ ನಡೆಯುತ್ತಿದೆ ಎಂದು ಆರೋಪಿಸಿದರು.
ವಿರೋಧ ಪಕ್ಷದ ನಾಯಕರ ಮನೆಗೇ ಚಾಕು-ಚೂರಿಗಳನ್ನು ಪಾರ್ಸಲ್ ಮಾಡುವಂತಹ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನೇತೃತ್ವದ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ.
ಇದು ಕೊಲೆಗಡುಕರ ಸರ್ಕಾರವೇ ಎಂಬ ಅನುಮಾನ ಮೂಡುತ್ತಿದೆ. ಬಿಜೆಪಿ ಕಾರ್ಯಕರ್ತರು ಬಳೆ ತೊಟ್ಟಿಲ್ಲ. ಇಂತಹ ಬೆದರಿಕೆಗಳಿಗೆ ನಾವು ಹೆದರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಜನರಿಗೆ ನೀಡಿದ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸುವಲ್ಲಿ ವಿಫಲವಾಗಿದೆ.
ಇದೀಗ ವಿರೋಧ ಪಕ್ಷದ ನಾಯಕರ ಮನೆಗೆ ಚಾಕು-ಚೂರಿಗಳನ್ನು ಕಳುಹಿಸುವಂತಹ ಕೃತ್ಯಗಳು ನಡೆಯುತ್ತಿವೆ. ಇದೇ ಕಾಂಗ್ರೆಸ್ನ ಸಂಸ್ಕಾರವನ್ನು ತೋರಿಸುತ್ತದೆ ಎಂದು ಟೀಕಿಸಿದರು.
ಘಟನೆಯನ್ನು ತೀವ್ರವಾಗಿ ಖಂಡಿಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯದಲ್ಲಿ ಇಂತಹ ಬೆದರಿಕೆ ಮತ್ತು ಹಿಂಸಾತ್ಮಕ ಕೃತ್ಯಗಳಿಗೆ ಕಡಿವಾಣ ಹಾಕಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R