
ಕಲಬುರಗಿ, 09 ನವೆಂಬರ್ (ಹಿ.ಸ.):
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಾರಾಟಕ್ಕಾಗಿ ಸಂಗ್ರಹಿಸಿಟ್ಟಿದ್ದ ಪಟಾಕಿ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೇಪೇಟ್ನಲ್ಲಿ ನಡೆದಿದೆ.
ದೀಪಾವಳಿ ಹಬ್ಬದ ಪ್ರಯುಕ್ತ ವ್ಯಾಪಾರಕ್ಕಾಗಿ ಪಟಾಕಿಗಳನ್ನು ಸಂಗ್ರಹಿಸಿಟ್ಟಿದ್ದ ಅಂಗಡಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ನೋಡನೋಡುತ್ತಿದ್ದಂತೆಯೇ ಬೆಂಕಿ ತೀವ್ರವಾಗಿ ವ್ಯಾಪಿಸಿ ಕೆಲವೇ ನಿಮಿಷಗಳಲ್ಲಿ ಇಡೀ ಅಂಗಡಿ ಸುಟ್ಟು ಕರಕಲಾಗಿದೆ. ಅಲ್ಲದೆ, ಅಂಗಡಿಯ ಅಕ್ಕಪಕ್ಕದಲ್ಲಿದ್ದ ಇತರ ಅಂಗಡಿಗಳಿಗೂ ಬೆಂಕಿ ವ್ಯಾಪಿಸಿದೆ.
ಘಟನೆಯಿಂದಾಗಿ ಸ್ಥಳೀಯರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸ್ಥಳೀಯರು ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದು, ಹೆಚ್ಚಿನ ಅನಾಹುತ ಸಂಭವಿಸುವುದನ್ನು ತಡೆಯಲು ಪ್ರಯತ್ನಿಸಿದ್ದಾರೆ.
ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿಗಳು ಬೆಂಕಿಗಾಹುತಿಯಾಗಿದ್ದು, ಅಪಾರ ಪ್ರಮಾಣದ ಆಸ್ತಿ ನಷ್ಟ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಸುಲೇಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R