
ಬೆಂಗಳೂರು, 09 ನವೆಂಬರ್ (ಹಿ.ಸ.):
ಕರ್ನಾಟಕದಲ್ಲಿ 2027ರ ಜನವರಿಯಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಚುನಾವಣಾ ಸಿದ್ಧತೆಗಳನ್ನು ಚುರುಕುಗೊಳಿಸಿದೆ.
ಇದರ ಭಾಗವಾಗಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ನಿರ್ದೇಶನ ನೀಡಿದೆ.
ರಾಜ್ಯ ಚುನಾವಣಾ ಆಯೋಗ ಶನಿವಾರ ಹೊರಡಿಸಿರುವ ನಿರ್ದೇಶನದಂತೆ, ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಸಹಾಯಕ ಆಯುಕ್ತರ ಹುದ್ದೆಯ ಅಥವಾ ಅದಕ್ಕೆ ಸಮಾನ ಶ್ರೇಣಿಯ ಅಧಿಕಾರಿಗಳನ್ನು ಚುನಾವಣಾಧಿಕಾರಿಗಳಾಗಿ ನೇಮಿಸಬೇಕು.
ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳಿಗೆ ತಹಸೀಲ್ದಾರ್ ಅಥವಾ ಸಮಾನ ಶ್ರೇಣಿಯ ಅಧಿಕಾರಿಗಳನ್ನು ಚುನಾವಣಾಧಿಕಾರಿಗಳನ್ನಾಗಿ ನೇಮಿಸಲು ಸೂಚಿಸಲಾಗಿದೆ.
ನವೆಂಬರ್ 16ರೊಳಗೆ ಪಟ್ಟಿ ಸಲ್ಲಿಕೆ
ಜಿಲ್ಲಾಧಿಕಾರಿಗಳು ಪ್ರಾಥಮಿಕ ಸಭೆಗಳನ್ನು ನಡೆಸಿ, ನೇಮಕಗೊಳ್ಳುವ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳಿಗೆ ಅಗತ್ಯ ತರಬೇತಿ ನೀಡಬೇಕು.
ನೇಮಕಾತಿಗೆ ಸಂಬಂಧಿಸಿದ ಪ್ರಸ್ತಾವನೆ ಹಾಗೂ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳ ಪಟ್ಟಿಯನ್ನು ನವೆಂಬರ್ 16ರೊಳಗೆ ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.
ಕರ್ನಾಟಕ ಪಂಚಾಯತ್ ರಾಜ್ (ಚುನಾವಣೆಗಳ ನಡವಳಿಕೆ) ನಿಯಮಗಳು, 1993ರ ನಿಯಮ 6ರ ಅನ್ವಯ ಸೂಕ್ತ ಅಧಿಕಾರಿಗಳನ್ನು ಗುರುತಿಸಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಕ್ಷೇತ್ರಗಳ ಸಂಖ್ಯೆಗೆ ಅನುಗುಣವಾಗಿ ನೇಮಕ
ಜಿಲ್ಲಾ ಪಂಚಾಯಿತಿ ಚುನಾವಣೆಗೆ ಪ್ರತಿ ತಾಲ್ಲೂಕಿಗೆ ಒಬ್ಬ ಸಹಾಯಕ ಆಯುಕ್ತರ ಶ್ರೇಣಿಯ ಅಧಿಕಾರಿಯನ್ನು ಚುನಾವಣಾಧಿಕಾರಿಯಾಗಿ ನೇಮಿಸಬೇಕು. 10ಕ್ಕಿಂತ ಹೆಚ್ಚು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿರುವ ತಾಲ್ಲೂಕುಗಳಲ್ಲಿ ಅಗತ್ಯವಿದ್ದರೆ ಇಬ್ಬರು ಚುನಾವಣಾಧಿಕಾರಿಗಳನ್ನು ನೇಮಿಸಲು ಅವಕಾಶ ಕಲ್ಪಿಸಲಾಗಿದೆ.
ಸಂಬಂಧಪಟ್ಟ ತಾಲ್ಲೂಕಿನ ತಹಸೀಲ್ದಾರ್ ಹೊರತುಪಡಿಸಿ, ತಹಸೀಲ್ದಾರ್ ಶ್ರೇಣಿಯ ಅಧಿಕಾರಿಗಳನ್ನು ಸಹಾಯಕ ಚುನಾವಣಾಧಿಕಾರಿಗಳಾಗಿ ನೇಮಿಸಬೇಕು.
ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಪ್ರತಿ 15 ಕ್ಷೇತ್ರಗಳಿಗೆ ಒಬ್ಬ ತಹಸೀಲ್ದಾರ್ ಅಥವಾ ಸಮಾನ ಶ್ರೇಣಿಯ ಅಧಿಕಾರಿಯನ್ನು ಚುನಾವಣಾಧಿಕಾರಿಯಾಗಿ ನೇಮಿಸಬೇಕು.
ಉಪ ತಹಸೀಲ್ದಾರ್ ಅಥವಾ ಸಮಾನ ಶ್ರೇಣಿಯ ಅಧಿಕಾರಿಗಳನ್ನು ಸಹಾಯಕ ಚುನಾವಣಾಧಿಕಾರಿಗಳಾಗಿ ನಿಯೋಜಿಸಲು ಸೂಚಿಸಲಾಗಿದೆ.
ಅನುಭವಿಗಳಿಗೆ ಆದ್ಯತೆ, ತರಬೇತಿಗೆ ಸೂಚನೆ
ಚುನಾವಣಾ ಕಾರ್ಯಕ್ಕೆ ನಿಯೋಜಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಹಿಂದಿನ ಚುನಾವಣೆಗಳ ಅನುಭವ ಇರುವಂತೆ ನೋಡಿಕೊಳ್ಳಬೇಕು ಎಂದು ಆಯೋಗ ಸೂಚಿಸಿದೆ.
ಚುನಾವಣಾ ಸಿದ್ಧತೆಯ ಆರಂಭದಿಂದ ಮತದಾನ ಹಾಗೂ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ವಿವಿಧ ಹಂತಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲ ಸಿಬ್ಬಂದಿಗೂ ಅಗತ್ಯ ತರಬೇತಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳನ್ನು ರಾಜ್ಯ ಚುನಾವಣಾ ಆಯೋಗದ ಪೂರ್ವಾನುಮತಿ ಇಲ್ಲದೆ ಬದಲಾಯಿಸುವಂತಿಲ್ಲ.
ಅನಿವಾರ್ಯ ಸಂದರ್ಭಗಳಲ್ಲಿ ಆಯೋಗದ ಅನುಮತಿ ಪಡೆದ ಬಳಿಕವಷ್ಟೇ ಬದಲಾವಣೆ ಮಾಡಬೇಕು ಎಂದು ಸ್ಪಷ್ಟಪಡಿಸಲಾಗಿದೆ.
ಡಿಸೆಂಬರ್ನಲ್ಲಿ ವೇಳಾಪಟ್ಟಿ ಪ್ರಕಟ ಸಾಧ್ಯತೆ
ಜನವರಿಯಲ್ಲಿ ಚುನಾವಣೆ ನಡೆಸುವ ಉದ್ದೇಶವಿದ್ದರೆ ಡಿಸೆಂಬರ್ ಮಧ್ಯಭಾಗದಲ್ಲಿ ರಾಜ್ಯ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ಇತ್ತೀಚೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದ್ದರು.
ಇದೀಗ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳ ನೇಮಕಾತಿಗೆ ಆಯೋಗ ನಿರ್ದೇಶನ ನೀಡಿರುವುದು ಚುನಾವಣಾ ಸಿದ್ಧತೆಗಳು ಮುಂದುವರಿದಿರುವುದಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ.
ಮತಪೆಟ್ಟಿಗೆಗಳ ಪರಿಶೀಲನೆ ಪೂರ್ಣ
ಮೂಲಗಳ ಪ್ರಕಾರ, ರಾಜ್ಯ ಚುನಾವಣಾ ಆಯೋಗ ರಾಜ್ಯಾದ್ಯಂತ ಲಭ್ಯವಿರುವ ಮತಪೆಟ್ಟಿಗೆಗಳ ಪರಿಶೀಲನೆ ಹಾಗೂ ಲೆಕ್ಕಪರಿಶೋಧನೆ ಪೂರ್ಣಗೊಳಿಸಿದೆ.
ಸುಮಾರು 80 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಮತಪೆಟ್ಟಿಗೆಗಳು ಮರುಬಳಕೆಗೆ ಯೋಗ್ಯ ಸ್ಥಿತಿಯಲ್ಲಿವೆ ಎಂದು ತಿಳಿದುಬಂದಿದೆ.
ಇದರ ಜತೆಗೆ, ಮತಪತ್ರಗಳ ಮೂಲಕ ಚುನಾವಣೆ ನಡೆಸಲು ಅಗತ್ಯವಿರುವ ಹೆಚ್ಚುವರಿ ಮತಪೆಟ್ಟಿಗೆಗಳು ಹಾಗೂ ಇತರ ಚುನಾವಣಾ ಸಾಮಗ್ರಿಗಳ ಖರೀದಿಗಾಗಿ ರಾಜ್ಯ ಸರ್ಕಾರ ಇತ್ತೀಚೆಗೆ ರಾಜ್ಯ ಚುನಾವಣಾ ಆಯೋಗಕ್ಕೆ 125 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎನ್ನಲಾಗಿದೆ.
ಒಟ್ಟಾರೆ, 2027ರ ಜನವರಿಯಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಚುನಾವಣಾ ಆಯೋಗ ಅಧಿಕಾರಿಗಳ ನೇಮಕಾತಿ,
ತರಬೇತಿ, ಮತಪೆಟ್ಟಿಗೆಗಳ ಪರಿಶೀಲನೆ ಹಾಗೂ ಚುನಾವಣಾ ಸಾಮಗ್ರಿಗಳ ವ್ಯವಸ್ಥೆ ಸೇರಿದಂತೆ ವಿವಿಧ ಹಂತಗಳಲ್ಲಿ ಸಿದ್ಧತೆಗಳನ್ನು ಕೈಗೊಂಡಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R