
ಧಾರವಾಡ, 16 ಫೆಬ್ರವರಿ (ಹಿ.ಸ.):
ಆ್ಯಂಕರ್:
2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗಾಗಿ ‘ಜ್ಞಾನ ಸಿಂಚನ’ ನೇರ ಫೋನ್-ಇನ್ ಕಾರ್ಯಕ್ರಮವನ್ನು ಧಾರವಾಡ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಅವರು ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ, ಉತ್ತಮ ಅಂಕಗಳನ್ನು ಗಳಿಸಲು ಹೇಗೆ ಅಧ್ಯಯನ ಮಾಡಬೇಕು ಎಂಬುದರ ಕುರಿತು ಮಾರ್ಗದರ್ಶನ ನೀಡಿದರು. ಪರೀಕ್ಷಾ ಒತ್ತಡವನ್ನು ಕಡಿಮೆ ಮಾಡಿಕೊಂಡು ಭಯಮುಕ್ತರಾಗಿ ಪರೀಕ್ಷೆ ಎದುರಿಸಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
‘ಜ್ಞಾನ ಸಿಂಚನ’ ನೇರ ಫೋನ್-ಇನ್ ಕಾರ್ಯಕ್ರಮವು ಫೆಬ್ರವರಿ 18, 20, 23 ಮತ್ತು 25ರಂದು ಮಧ್ಯಾಹ್ನ 3ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಜಿಲ್ಲೆಯ ಎಲ್ಲ ಪ್ರೌಢಶಾಲೆಗಳಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದ 20ಕ್ಕೂ ಹೆಚ್ಚು ಮೊಬೈಲ್ ಸಂಖ್ಯೆಗಳು ನೀಡಲಾಗಿದೆ. ಈ ಸಂಖ್ಯೆಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅನುಮಾನಗಳಿಗೆ ತಜ್ಞರಿಂದ ಪರಿಹಾರ ಪಡೆಯಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಪರೀಕ್ಷಾ ಮಂಡಳಿ ಪ್ರಕಟಿಸಿರುವ ನೀಲನಕ್ಷೆ, ಮಾದರಿ ಪ್ರಶ್ನೆಪತ್ರಿಕೆ ಹಾಗೂ ಪಾಠ ಆಧಾರಿತ ಪ್ರಶ್ನೆಗಳ ಅಧ್ಯಯನಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ನೀಡಲಾಯಿತು. ಉತ್ತಮ ತಯಾರಿ ಮತ್ತು ಸಮಯ ನಿಯಂತ್ರಣದಿಂದಲೇ ಉತ್ತಮ ಫಲಿತಾಂಶ ಸಾಧ್ಯ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ 43 ವಿವಿಧ ವಿಷಯಗಳ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಪ್ರಶ್ನೆಗಳಿಗೆ ಉತ್ತರಿಸಿದರು. ಉಪನಿರ್ದೇಶಕರ ಕಚೇರಿಯ ಶಿಕ್ಷಣಾಧಿಕಾರಿಗಳು, ಡಿವೈಪಿಸಿ, ವಿಷಯ ಪರಿವೀಕ್ಷಕರು ಹಾಗೂ ಇತರ ಸಂಪನ್ಮೂಲ ವ್ಯಕ್ತಿಗಳು ಹಾಜರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa