
ನವದೆಹಲಿ, 17 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಮಂಗಳವಾರ ಭಾರತ ಭೇಟಿಗಾಗಿ ಮುಂಬೈಗೆ ಆಗಮಿಸಿದರು.
ಫೆಬ್ರವರಿ 19ರವರೆಗೆ ನಡೆಯುವ ಈ ಅಧಿಕೃತ ಭೇಟಿಯ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಹತ್ವದ ದ್ವಿಪಕ್ಷೀಯ ಚರ್ಚೆ ನಡೆಸಲಿದ್ದಾರೆ.
ಇದೇ ವೇಳೆ ‘ಭಾರತ-ಫ್ರಾನ್ಸ್ ನಾವೀನ್ಯತೆ ವರ್ಷ 2026’ಕ್ಕೆ ಚಾಲನೆ ನೀಡುವ ಕಾರ್ಯಕ್ರಮವೂ ನಿಗದಿಯಾಗಿದೆ.
ಮುಂಬೈ ವಿಮಾನ ನಿಲ್ದಾಣದಲ್ಲಿ ಅಧ್ಯಕ್ಷ ಮ್ಯಾಕ್ರನ್ ಮತ್ತು ಪ್ರಥಮ ಮಹಿಳೆ ಬ್ರಿಗಿಟ್ಟೆ ಮ್ಯಾಕ್ರನ್ ಅವರನ್ನು ಮಹಾರಾಷ್ಟ್ರ ರಾಜ್ಯಪಾಲ ಆಚಾರ್ಯ ದೇವವ್ರತ್ ಹಾಗೂ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಆತ್ಮೀಯವಾಗಿ ಸ್ವಾಗತಿಸಿದರು.
ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡು, ಈ ಭೇಟಿ ಭಾರತ-ಫ್ರಾನ್ಸ್ ಕಾರ್ಯತಂತ್ರದ ಸಹಭಾಗಿತ್ವಕ್ಕೆ ಮತ್ತಷ್ಟು ಉತ್ತೇಜನ ನೀಡಲಿದೆ ಎಂದು ತಿಳಿಸಿದ್ದಾರೆ.
ಈ ಭೇಟಿಯ ವೇಳೆ ಪ್ರಮುಖವಾಗಿ 114 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಸಂಬಂಧಿಸಿದ ಮೆಗಾ ರಕ್ಷಣಾ ಒಪ್ಪಂದ ಚರ್ಚೆಗೆ ಬರಲಿದೆ.
ಈ ಕುರಿತು ರಕ್ಷಣಾ ಸ್ವಾಧೀನ ಮಂಡಳಿ ಈಗಾಗಲೇ ಅನುಮೋದನೆ ನೀಡಿರುವುದು ಗಮನಾರ್ಹ. ರಫೇಲ್ ಯುದ್ಧ ವಿಮಾನಗಳನ್ನು ಫ್ರಾನ್ಸ್ ನಿರ್ಮಿಸಿದೆ.
ಅಧ್ಯಕ್ಷ ಮ್ಯಾಕ್ರನ್ ಮತ್ತು ಪ್ರಧಾನಿ ಮೋದಿ ಜಂಟಿಯಾಗಿ ‘ಎಐ ಇಂಪ್ಯಾಕ್ಟ್ ಶೃಂಗಸಭೆ’ಯಲ್ಲಿ ಭಾಗವಹಿಸಲಿದ್ದಾರೆ. ನಾವೀನ್ಯತೆ, ಸ್ಟಾರ್ಟ್‌ಅಪ್ ಸಹಯೋಗ, ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ ಜಂಟಿ ಯೋಜನೆಗಳಿಗೆ ಉತ್ತೇಜನ ನೀಡುವ ನಿರೀಕ್ಷೆ ಇದೆ. ‘ಭಾರತ-ಫ್ರಾನ್ಸ್ ನಾವೀನ್ಯತೆ ವೇದಿಕೆ’ ಅಡಿಯಲ್ಲಿ ಹಲವು ಒಪ್ಪಂದಗಳು ಘೋಷಣೆಯಾಗುವ ಸಾಧ್ಯತೆ ಇದೆ.
ಕರ್ನಾಟಕದ ವೇಮಗಲ್‌ನಲ್ಲಿ ಟಾಟಾ ಏರ್‌ಬಸ್ ಕಂಪನಿಯ H125 ಲೈಟ್ ಯುಟಿಲಿಟಿ ಹೆಲಿಕಾಪ್ಟರ್ ಅಂತಿಮ ಜೋಡಣೆ ಘಟಕವನ್ನು ಉಭಯ ನಾಯಕರು ಜಂಟಿಯಾಗಿ ಉದ್ಘಾಟಿಸಲಿದ್ದಾರೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಶಾಶ್ವತ ಸದಸ್ಯತ್ವದ ಬೇಡಿಕೆಗೆ ಫ್ರಾನ್ಸ್ ನಿರಂತರ ಬೆಂಬಲ ವ್ಯಕ್ತಪಡಿಸುತ್ತಿರುವುದು ಗಮನಾರ್ಹ. ಈ ಭೇಟಿ ಭಾರತ-ಫ್ರಾನ್ಸ್ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುವುದರೊಂದಿಗೆ ರಕ್ಷಣಾ, ತಂತ್ರಜ್ಞಾನ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಸಹಕಾರದ ಹೊಸ ಅಧ್ಯಾಯಕ್ಕೆ ಚಾಲನೆ ನೀಡಲಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa