
ಕೊಪ್ಪಳ , 20 ಫೆಬ್ರವರಿ (ಹಿ.ಸ.):
ಆ್ಯಂಕರ್ : ಬಿಡಿಎ, ಕೆಕೆಆರ್‍ಟಿಸಿ, ಕೆಎಸ್‍ಡಿಎಲ್, ತಾಂತ್ರಿಕ ಶಿಕ್ಷಣ ಇಲಾಖೆ ಮುಂತಾದ ಇಲಾಖೆ/ಸಂಸ್ಥೆಗಳಲ್ಲಿನ ವಿವಿಧ ಹುದ್ದೆಗಳಿಗೆ ಫೆ.22 ರಂದು ನೇರ ನೇಮಕಾತಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳನ್ನು ಸುಗಮ ಮತ್ತು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಅಂತರದ ಪ್ರದೇಶದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ
ನಿಷೇಧಾಜ್ಞೆ ಜಾರಿಗೊಳಿಸಿ
ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.
ನೇರ ನೇಮಕಾತಿ ಪರೀಕ್ಷೆಗಳು ಕೊಪ್ಪಳ ತಾಲ್ಲೂಕಿನ 13 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಹಾಗೂ ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ನಿಗದಿತ 13 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.
ನಿಷೇಧಾಜ್ಞೆ ಆದೇಶದನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್, ಪೇಜರ್, ಜರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್