


ಬಳ್ಳಾರಿ, 20 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಬೇಸಿಗೆ ಆರಂಭವಾಗಲಿದ್ದು, ಜಿಲ್ಲೆಯಲ್ಲಿ ಜನ- ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಕೊರತೆಯಾಗದಂತೆ ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ನೂತನ ಜಿಲ್ಲಾಡಳಿತ ಭವನದ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೇಸಿಗೆ ಹಿನ್ನೆಲೆಯಲ್ಲಿ ಜಿಲ್ಲೆಯ ಬಳ್ಳಾರಿ ತಾಲ್ಲೂಕಿನಲ್ಲಿ 21, ಕಂಪ್ಲಿ-16, ಕುರುಗೋಡು-15, ಸಂಡೂರು-3, ಸಿರುಗುಪ್ಪ ತಾಲ್ಲೂಕಿನ 28 ಗ್ರಾಮಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 83 ಗ್ರಾಮಗಳಲ್ಲಿ ಬೇಸಿಗೆಯಲ್ಲಿ ಒಂದು ವೇಳೆ ಮಳೆ ಬಾರದಿದ್ದರೆ, ನೀರಿನ ಸಮಸ್ಯೆ ಉದ್ಭವಿಸಬಹುದು ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯು ಅಂದಾಜಿಸಿದ್ದು, ಈ ಕೂಡಲೇ ಅಂತಹ ಗ್ರಾಮಗಳಲ್ಲಿ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಮುಂಜಾಗ್ರತಾ ವಹಿಸಬೇಕು ಎಂದು ಸಂಬ0ಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಕುಡಿಯುವ ನೀರಿಗೆ ಸಮಸ್ಯೆಯಾಗಬಹುದಾದ ಗ್ರಾಮಗಳಲ್ಲಿ ಸರ್ಕಾರಿ ಬೋರ್‌ವೇಲ್ ಗಳನ್ನು ಗುರುತಿಸಿ, ಒಂದು ವೇಳೆ ಕೆಟ್ಟಿದ್ದಲ್ಲಿ, ರಿಪೇರಿ ಕೈಗೊಳ್ಳಬೇಕು. ನಂತರ ಖಾಸಗಿ ಬೋರ್ವೆಲ್ ಗಳನ್ನು ಕೂಡ ಗುರುತಿಸಿಟ್ಟುಕೊಳ್ಳಬೇಕು. ಇಲ್ಲವಾದಲ್ಲಿ ಹೊಸ ಬೋರ್ ವೆಲ್ ಕೊರೆಸಲು ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 504 ಆರ್‌ಓ ಘಟಕಗಳಿದ್ದು, 454 ಕಾರ್ಯನಿರ್ವಹಿಸುತ್ತಿವೆ. ಉಳಿದ 54 ಆರ್‌ಓ ಘಟಕಗಳ ನಿರ್ವಹಣೆಗೆ ಕ್ರಮವಹಿಸಬೇಕು ಎಂದರಲ್ಲದೇ, ಕುಡಿಯುವ ನೀರು ಎಲ್ಲೂ ಕಲುಷಿತಗೊಳ್ಳದಂತೆ ಎಚ್ಚರವಹಿಸಬೇಕು ಎಂದು ನಿರ್ದೇಶನ ನೀಡಿದರು.
ನಗರ ಮತ್ತು ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಮಸ್ಯೆಯಾದಲ್ಲಿ ನೀರಿನ ಟ್ಯಾಂಕರ್ ಇರಿಸಿಕೊಳ್ಳಬೇಕು. ಮುಖ್ಯವಾಗಿ ಟ್ಯಾಂಕರ್ ಗಳ ಸ್ಥಿತಿ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.
ಮೇವು ದಾಸ್ತಾನು ಇಟ್ಟುಕೊಳ್ಳಿ :
ಜಿಲ್ಲೆಯಲ್ಲಿ ಈ ಬಾರಿ ಎರಡನೇ ಬೆಳೆ ಇಲ್ಲವಾದುದರಿಂದ ಜಾನುವಾರುಗಳಿಗೆ ಮೇವಿನ ಸಮಸ್ಯೆ ಉಲ್ಬಣಗೊಳ್ಳದಂತೆ ಅಗತ್ಯ ಮೇವಿನ ದಾಸ್ತಾನು ಇಟ್ಟುಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ರಾಜ್ಯ ವಿಪತ್ತು ಉಪಶಮನ ನಿಧಿಯಡಿ ಬಾಕಿ ಇರುವ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಬೇಕು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು, ಜಿಲ್ಲೆಯಲ್ಲಿ ಮೇವಿನ ದಾಸ್ತಾನು(ಬಣವೆ), ಅರಣ್ಯ ಭಾಗದಲ್ಲಿ ಕಾಳ್ಗಿಚ್ಚು ಉಂಟಾಗ0ತೆ ಎಚ್ಚರವಹಿಸಬೇಕು. ಘಟನೆ ಸಂಭವಿಸಿದಲ್ಲಿ ಶಮನಗೊಳಿಸಲು ಸಿದ್ದರಿರಬೇಕು ಎಂದು ಅಗ್ನಿಶಾಮಕ ಅಧಿಕಾರಿಗಳಿಗೆ ತಿಳಿಸಿದರು.
ಬಿಸಿಲಿನ ತಾಪಮಾನದ ಅಲೆ ಕುರಿತು ಜಾಗೃತಿ ಮೂಡಿಸಿ : ಜಿಲ್ಲೆಯಲ್ಲಿ ಮಾರ್ಚ್ ಅಂತ್ಯದಿ0ದ ಮೇ ಅಂತ್ಯದವರೆಗೆ ಬಿಸಿಲಿನ ತಾಪಮಾನ ಅಲೆಗಳ ಪ್ರಖರತೆ ಹೆಚ್ಚಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಇದ್ದು, ಸತತ ಮೂರು ದಿನಗಳ ಕಾಲ 40 ಡಿಗ್ರಿ ಸೆಲ್ಸಿಯಸ್ ನಿರಂತರವಾಗಿ ತಾಪಮಾನ ಇದ್ದಲ್ಲಿ ಬಿಸಿಲಿನ ತಾಪಮಾನ ಅಲೆಗಳು ಎಂದು ಪರಿಗಣಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ. ಈ ಕುರಿತು ಸಾರ್ವಜನಿಕರಿಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜಾಗೃತಿ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಬೇಕು ಎಂದು ಸಂಬ0ಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ಮೇವಿನ ಕೊರತೆ ಉಂಟಾದಲ್ಲಿ ದೂರು ಸಲ್ಲಿಸಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸಹಾಯವಾಣಿ ಆರಂಭಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಬ್ದುಲ್ ರೆಹಮಾನ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಇಂದುಧರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಸೇರಿದಂತೆ ಲೋಕೋಪಯೋಗಿ, ಪಶು ಸಂಗೋಪನೆ, ಕೃಷಿ ಅಧಿಕಾರಿಗಳು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್