
ಬೆಂಗಳೂರು, 21 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು ಇಂದು ಜಿಬಿಎ ಕೇಂದ್ರ ಕಚೇರಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ, ರಸ್ತೆ ಕಾಮಗಾರಿಗಳು, ಒಳಚರಂಡಿ ಮತ್ತು ಕುಡಿಯುವ ನೀರಿನ ಯೋಜನೆಗಳು, ನಗರ ಸೌಂದರ್ಯೀಕರಣ ಹಾಗೂ ಸಾರ್ವಜನಿಕ ಸೌಲಭ್ಯಗಳ ನಿರ್ಮಾಣ ಕಾರ್ಯಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲಾಯಿತು. ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳುವಂತೆ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪ್ರಗತಿಯ ಹಂತದಲ್ಲಿರುವ ಯೋಜನೆಗಳ ಬಗ್ಗೆ ವಿವರವಾದ ಮಾಹಿತಿ ಪಡೆದು, ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಸೂಚಿಸಿದರು. ಗುಣಮಟ್ಟ ಕಾಪಾಡಿಕೊಳ್ಳುವುದು ಹಾಗೂ ಪಾರದರ್ಶಕತೆ ಕಡ್ಡಾಯವಾಗಿರಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ಕಾಮಗಾರಿಗಳ ಪ್ರಗತಿ ವರದಿಯನ್ನು ಮಂಡಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa