ಎತ್ತಿನಹೊಳೆ ಯೋಜನೆ: ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಲು ಸೂಚನೆ
ಕೋಲಾರ, ೨೧ ಫೆಬ್ರವರಿ (ಹಿ.ಸ) : ಆ್ಯಂಕರ್ : ಜಿಲ್ಲೆಯ ಬಹುನಿರೀಕ್ಷಿತ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಯ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮತ್ತು ಡಿಪಿಆರ್ ಸಿದ್ಧಪಡಿಸುವ ಕೆಲಸಗಳನ್ನು ಚುರುಕುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.
ಚಿತ್ರ - ಕೋಲಾರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಎತ್ತಿನಹೊಳೆ ಯೋಜನೆಯ ಭೂಸ್ವಾಧೀನದ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದರು.


ಕೋಲಾರ, ೨೧ ಫೆಬ್ರವರಿ (ಹಿ.ಸ) :

ಆ್ಯಂಕರ್ : ಜಿಲ್ಲೆಯ ಬಹುನಿರೀಕ್ಷಿತ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಯ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮತ್ತು ಡಿಪಿಆರ್ ಸಿದ್ಧಪಡಿಸುವ ಕೆಲಸಗಳನ್ನು ಚುರುಕುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇಲ್ಲಿನ ಕೆಸ್ವಾನ್ ಸಭಾಂಗಣದಲ್ಲಿ ನಡೆದ ಕೋಲಾರ ಜಿಲ್ಲೆಗೆ ಸಂಬಂಧಿಸಿದ ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋಲಾರ ತಾಲ್ಲೂಕಿನ ನರಸಾಪುರ, ವೇಮಗಲ್ ಮತ್ತು ವಕ್ಕಲೇರಿ ಹೋಬಳಿಗಳ ವ್ಯಾಪ್ತಿಯಲ್ಲಿನ ಭೂಸ್ವಾಧೀನ ಪ್ರಕ್ರಿಯೆಯ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಬಾಕಿ ಇರುವ ಭೂಮಿಗೆ ಸಂಬಂಧಿಸಿದಂತೆ ಕೂಡಲೇ ಗೆಜೆಟ್ ಅಧಿಸೂಚನೆ ಹೊರಡಿಸಲು ಮತ್ತು ಆಕ್ಷೇಪಣೆಗಳ ವಿಚಾರಣೆಯನ್ನು ತ್ವರಿತವಾಗಿ ಮುಗಿಸಲು ಎಸ್ಎಲ್ಒ (Sಐಔ) ಅವರಿಗೆ ಸೂಚಿಸಿದರು.

ಭೂಸ್ವಾಧೀನ ಕಾಯ್ದೆಯನ್ವಯ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ ಮೂರು ತಿಂಗಳೊಳಗೆ ಶೇ. ೫೦ ರ? ಹಣವನ್ನು ಭೂಮಾಲೀಕರಿಗೆ ಪಾವತಿಸಬೇಕು. ಈ ನಿಟ್ಟಿನಲ್ಲಿ ಅನುದಾನದ ಲಭ್ಯತೆ ಮತ್ತು ವಿತರಣೆಯಲ್ಲಿ ವಿಳಂಬವಾಗದಂತೆ ನೋಡಿಕೊಳ್ಳಲು ವಿಶ್ವೇಶ್ವರಯ್ಯ ಜಲನಿಗಮದ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಭೂ ದಾಖಲೆಗಳಲ್ಲಿನ ಪೋಡಿ ಮತ್ತು ಹಿಸ್ಸಾ ಸಂಖ್ಯೆಗಳ ವ್ಯತ್ಯಾಸದಿಂದಾಗಿ ಭೂಸ್ವಾಧೀನಕ್ಕೆ ಅಡ್ಡಿಯಾಗದಂತೆ, ಕಂದಾಯ ಇಲಾಖೆಯ ಸಹಯೋಗದೊಂದಿಗೆ ಭೌತಿಕ ಪರಿಶೀಲನೆ ಮತ್ತು ರೀ-ಸರ್ವೆ ಕಾರ್ಯವನ್ನು ೧೦ ದಿನಗಳ ಒಳಗೆ ಪೂರ್ಣಗೊಳಿಸಬೇಕು ಎಂದು ಆದೇಶಿಸಿದರು.

ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವುದಷ ಅಲ್ಲದೆ, ಪ್ರತಿ ಮನೆಗೂ ಕುಡಿಯುವ ನೀರು ತಲುಪಿಸುವ ’ಜಲಜೀವನ್ ಮಿಷನ್’ (ಎಎಒ) ನೊಂದಿಗೆ ಈ ಯೋಜನೆಯನ್ನು ಜೋಡಿಸುವ ಬಗ್ಗೆ ಚರ್ಚಿಸಲಾಯಿತು.

ಪ್ರತಿ ತಾಲ್ಲೂಕಿಗೂ ಪ್ರತ್ಯೇಕವಾದ ನೀರು ವಿತರಣಾ ಜಾಲದ ಡಿಪಿಆರ್ ಸಿದ್ಧಪಡಿಸಬೇಕು. ಇದರಲ್ಲಿ ಗ್ರಾಮೀಣ ಪ್ರದೇಶದ ಜೊತೆಗೆ ಪಟ್ಟಣ ಪ್ರದೇಶಗಳನ್ನೂ ಒಳಗೊಳ್ಳುವಂತೆ ಹಾಗೂ ಟ್ರೀಟ್ಮೆಂಟ್ ಪ್ಲಾಂಟ್ಗಳ ಸ್ಥಾಪನೆಗೆ ಅಗತ್ಯವಿರುವ ತಾಂತ್ರಿಕ ಯೋಜನೆಯನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಶ್ರೀನಿವಾಸಪುರ ತಾಲ್ಲೂಕಿನ ೨೮ ಗ್ರಾಮಗಳ ವ್ಯಾಪ್ತಿಯ ೫೧ ಎಕರೆ ೩೦ ಗುಂಟೆ ಹಾಗೂ ಮುಳಬಾಗಿಲಿನ ೮ ಗುಂಟೆ ಭೂಮಿಯ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಕೂಡಲೇ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಗಡುವು ನೀಡಿದರು.

ಸಭೆಗೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರರು (ಇಇ) ಗೈರುಹಾಜರಾಗಿರುವುದಕ್ಕೆ ಜಿಲ್ಲಾಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಯೋಜನೆಯ ಗಂಭೀರತೆಯನ್ನು ಅರ್ಥಮಾಡಿಕೊಂಡು ಪ್ರತಿಯೊಬ್ಬ ಜವಾಬ್ದಾರಿಯುತ ಅಧಿಕಾರಿಯೂ ಸಭೆಯಲ್ಲಿ ಹಾಜರಿರಬೇಕು ಎಂದು ಎಚ್ಚರಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಸ್.ಎಂ ಮಂಗಳ, ವಿಶ್ವೇಶ್ವರಯ್ಯ ಜಲನಿಗಮದ ಅಧಿಕಾರಿಗಳು, ವಿಶೇಷ ಭೂಸ್ವಾಧೀನಾಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಚಿತ್ರ - ಕೋಲಾರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಎತ್ತಿನಹೊಳೆ ಯೋಜನೆಯ ಭೂಸ್ವಾಧೀನದ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande