
ಗದಗ, 22 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ 5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳಿಂದ ಟ್ರ್ಯಾಪ್ಗೆ ಸಿಕ್ಕಿಬಿದ್ದ ಘಟನೆ ಗದಗ ಜಿಲ್ಲೆಯಲ್ಲಿ ಭಾರಿ ಸಂಚಲನ ಮೂಡಿಸಿದೆ.
ಲಕ್ಷ್ಮೇಶ್ವರ ಪಟ್ಟಣದಲ್ಲಿ ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಶಾಸಕ ಡಾ. ಚಂದ್ರು ಲಮಾಣಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ಗದಗ ನಗರಕ್ಕೆ ಕರೆತಂದರು. ಬಳಿಕ ಶಾಸಕ ಸೇರಿದಂತೆ ಸರ್ಕಾರಿ ಪಿಎ ಮಂಜುನಾಥ್ ವಾಲ್ಮಿಕಿ ಹಾಗೂ ಖಾಸಗಿ ಪಿಎ ಗುರು ಲಮಾಣಿ ಮೂವರನ್ನೂ ಗದಗ ಜಿಮ್ಸ್ ಆಸ್ಪತ್ರೆಗೆ ಕರೆದೊಯ್ದು ಆರೋಗ್ಯ ತಪಾಸಣೆ ನಡೆಸಲಾಯಿತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 1:30 ಗಂಟೆಯವರೆಗೆ ಒಟ್ಟು 11 ಗಂಟೆಗಳ ಕಾಲ ನಿರಂತರವಾಗಿ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದರು. ವಿಚಾರಣೆ ಪೂರ್ಣಗೊಂಡ ಬಳಿಕ ಮತ್ತೊಮ್ಮೆ ಆರೋಗ್ಯ ತಪಾಸಣೆಗಾಗಿ ಆರೋಪಿಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸ್ಥಳದಲ್ಲಿ ಹೈಡ್ರಾಮಾ ನಡೆಯಿತು.
ಶಾಸಕನನ್ನು ಕರೆದುಕೊಂಡು ಹೋಗುತ್ತಿದ್ದ ವಾಹನವನ್ನು ತಡೆಯಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕಾರಿಗೆ ಮುಗಿಬಿದ್ದ ಘಟನೆ ಕೂಡ ನಡೆಯಿತು.
ಆರೋಗ್ಯ ತಪಾಸಣೆ ಮುಗಿದ ಬಳಿಕ ಲೋಕಾಯುಕ್ತ ಅಧಿಕಾರಿಗಳು ಆರೋಪಿಗಳನ್ನು ಕೊಪ್ಪಳ, ಹೊಸಪೇಟೆ ಮಾರ್ಗವಾಗಿ ಬೆಂಗಳೂರಿನತ್ತ ಕರೆದೊಯ್ದರು.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಉದ್ದೇಶದಿಂದ ಆರೋಪಿಗಳನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ ಎಂದು ಮೂಲಗಳು ತಿಳಿಸಿವೆ.
ಲೋಕಾಯುಕ್ತರ ದಾಳಿ ಹಾಗೂ ಶಾಸಕರ ಅರೆಸ್ಟ್ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ಆರಂಭವಾಗಿದ್ದು, ಮುಂದಿನ ಕಾನೂನು ಕ್ರಮಗಳತ್ತ ಎಲ್ಲರ ಗಮನ ಕೇಂದ್ರೀಕೃತವಾಗಿದೆ.
ಹಿಂದೂಸ್ತಾನ್ ಸಮಾಚಾರ್ / lalita MP