
ಬೆಂಗಳೂರು, 23 ಫೆಬ್ರವರಿ (ಹಿ.ಸ.):
ಆ್ಯಂಕರ್:ಸಮಗ್ರ ಶಿಕ್ಷಣ ಕರ್ನಾಟಕ ಮತ್ತು ಡಬ್ಲುಡಬ್ಲುಎಫ್ ಇಂಡಿಯಾ ಸಹಯೋಗದಲ್ಲಿ ವಿಕಾಸಸೌಧದಲ್ಲಿ ಆಯೋಜಿಸಲಾದ “ಮಿಷನ್ ಪ್ರಕೃತಿ ತರಗತಿಯಿಂದ ಸಂರಕ್ಷಣೆಯತ್ತ” ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ವಿದ್ಯಾರ್ಥಿಗಳು ಕೇವಲ ಅಂಕಗಳಿಗಾಗಿ ಓದದೇ ವಿಷಯವನ್ನು ಆಳವಾಗಿ ಅರ್ಥೈಸಿಕೊಳ್ಳುವತ್ತ ಗಮನ ಹರಿಸಬೇಕು ಎಂದು ಸಲಹೆ ನೀಡಿದರು. “ಅರಿವು ಮೂಡಿದರೆ ಉತ್ತಮ ಫಲಿತಾಂಶ ತಾನಾಗಿಯೇ ಬರುತ್ತದೆ. ಪರಿಸರ ಜಾಗೃತಿ, ತ್ಯಾಜ್ಯ ನಿರ್ವಹಣೆ ಹಾಗೂ ಮಾನವೀಯ ಮೌಲ್ಯಗಳನ್ನು ಚಿಕ್ಕ ವಯಸ್ಸಿನಲ್ಲೇ ಬೆಳೆಸಿಕೊಳ್ಳುವುದು ಶಿಕ್ಷಣದ ಮೊದಲ ಹೆಜ್ಜೆ,” ಎಂದರು. ಮುಂದಿನ ಶೈಕ್ಷಣಿಕ ವರ್ಷದಿಂದ 1ರಿಂದ 10ನೇ ತರಗತಿವರೆಗೆ ‘ನೈತಿಕ ವಿಜ್ಞಾನ’ ಪಠ್ಯಪುಸ್ತಕವನ್ನು ಪರಿಚಯಿಸಲಾಗುವುದು ಎಂದು ತಿಳಿಸಿದರು.
ಪರಿಸರ ಜಾಗೃತಿ ಮತ್ತು ಸುಸ್ಥಿರ ಅಭ್ಯಾಸಗಳಲ್ಲಿ ವಿಶೇಷ ಸಾಧನೆ ಮಾಡಿದ ರಾಜ್ಯದ 10 ಸರ್ಕಾರಿ ಶಾಲೆಗಳಿಗೆ ‘ಅತ್ಯುತ್ತಮ ಶಾಲೆ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿಜೇತ ಶಾಲೆಗಳ ವಿದ್ಯಾರ್ಥಿಗಳು ತಮ್ಮ ಅನುಭವ ಮತ್ತು ಕಲಿತ ಪಾಠಗಳನ್ನು ಇತರರೊಂದಿಗೆ ಹಂಚಿಕೊಳ್ಳಬೇಕು ಎಂದು ಸಚಿವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್, ಕರಣ್ ಭಲ್ಲಾ ,ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು, ವಿವಿಧ ಜಿಲ್ಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa