
ಗದಗ, 23 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಲೋಕಾಯುಕ್ತ ಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿರುವ ಶಾಸಕ ಡಾ. ಚಂದ್ರು ಲಮಾಣಿ ಅವರು ತಕ್ಷಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಭಾರಿ ಪ್ರತಿಭಟನೆ ನಡೆಸಲಾಯಿತು.
ಗದಗ ಜಿಲ್ಲೆ ಶಿರಹಟ್ಟಿ ಪಟ್ಟಣದಲ್ಲಿ ನಡೆದ ಈ ಬಹಿರಂಗ ಹೋರಾಟದಲ್ಲಿ, ಆಂಜನೇಯ ದೇವಸ್ಥಾನದಿಂದ ತಹಶಿಲ್ದಾರ್ ಕಚೇರಿ ವರೆಗೆ ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆ ನಡೆಸಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಕಾಂಗ್ರೆಸ್ ಮುಖಂಡ ರಾಮಣ್ಣ ಲಮಾಣಿ, ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಸುಜಾತಾ ದೊಡ್ಡಮನಿ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾದರು.
ಪ್ರತಿಭಟನೆಯ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡರು, ಲೋಕಾಯುಕ್ತ ಟ್ರ್ಯಾಪ್ಗೆ ಒಳಗಾದ ಶಾಸಕ ಡಾ. ಚಂದ್ರು ಲಮಾಣಿ ಅವರು ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದರು.
ತಮ್ಮ ಮೇಲೆ ಬಂದ ಭ್ರಷ್ಟಾಚಾರ ಆರೋಪಗಳಿಂದ ತಪ್ಪಿಸಿಕೊಳ್ಳಲು ಸಚಿವ ಎಚ್.ಕೆ. ಪಾಟೀಲ ಅವರ ಹೆಸರನ್ನು ಅನವಶ್ಯಕವಾಗಿ ಎಳೆಯಲಾಗುತ್ತಿದೆ ಎಂದು ಕಿಡಿಕಾರಿದರು.
“ಈ ಪ್ರಕರಣದಲ್ಲಿ ಸಚಿವ ಎಚ್.ಕೆ. ಪಾಟೀಲರ ಯಾವುದೇ ಕೈವಾಡ ಇಲ್ಲ. ಭ್ರಷ್ಟಾಚಾರದಲ್ಲಿ ತೊಡಗಿರುವುದು ಡಾ. ಚಂದ್ರು ಲಮಾಣಿ ಅವರೇ ನೈತಿಕ ಹೊಣೆ ಹೊತ್ತು ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದರು.
ಹಿಂದೂಸ್ತಾನ್ ಸಮಾಚಾರ್ / lalita MP