
ಬಳ್ಳಾರಿ, 24 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಅಲ್ಪಸಂಖ್ಯಾತ ಸಮುದಾಯಗಳಿಗಿರುವ ಕೇಂದ್ರ ಮತ್ತು ರಾಜ್ಯ ಪುರಸ್ಕøತ ಯೋಜನೆಗಳ ಕುರಿತು ಸಮುದಾಯದ ಜನರಿಗೆ ಅರಿವು ಮೂಡಿಸಬೇಕು ಎಂದು ರಾಜ್ಯಸಭೆ ಸದಸ್ಯ ಡಾ. ಸೈಯದ್ ನಾಸೀರ್ ಹುಸೇನ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
.
ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿವಿಧ ಇಲಾಖೆಗಳಲ್ಲಿ ಅಲ್ಪಸಂಖ್ಯಾತರಿಗಿರುವ ಯೋಜನೆಗಳನ್ನು ಪಟ್ಟಿಮಾಡಿಕೊಂಡು, ಅವುಗಳನ್ನು ಅವರಿಗಾಗಿಯೇ ತಲುಪಿಸಲು ಸಾಕಷ್ಟು ಪ್ರಚಾರ ಕಾರ್ಯ ಕೈಗೊಳ್ಳಬೇಕು. ಇದರಿಂದ ಸಮುದಾಯಗಳ ಜನರು ಸೌಲಭ್ಯ ಪಡೆಯಲು ಮುಂದೆ ಬರುತ್ತಾರೆ ಎಂದು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಿಗೆ ಸೂಚಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿಯೇ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಯೋಜನೆಗಳನ್ನು ಜಾರಿಗೊಳಿಸಿದೆ.
ಅವುಗಳನ್ನು ಕ್ಷೇತ್ರಮಟ್ಟದಲ್ಲಿ ಪರಿಪೂರ್ಣವಾಗಿ ಅನುಷ್ಠಾನಗೊಳಿಸಬೇಕು. ಆದರೆ ಸಮುದಾಯಗಳಲ್ಲಿ ಮಾಹಿತಿ ಕೊರತೆ ಇದೆ. ಹಾಗಾಗಿ ವಿವಿಧ ಇಲಾಖೆಗಳು ನೀಡುವ ಫಲಾನುಭವಿ ಆಧಾರಿತ ಮತ್ತು ಸಮುದಾಯ ಆಧಾರಿತ ಯೋಜನೆಗಳನ್ನು ಅರ್ಹ ಅಲ್ಪಸಂಖ್ಯಾತರಿಗೆ ತಲುಪಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮಾಹಿತಿ ಕೇಂದ್ರದ ಮೂಲಕ ಜನರಲ್ಲಿ ಅರಿವು ಮೂಡಿಸಬೇಕು ಎಂದರು.
ವಿವಿಧ ಇಲಾಖೆಗಳಲ್ಲಿನ ಅಲ್ಪಸಂಖ್ಯಾತರಿಗೆ ಸಿಗಬೇಕಾದ ಸೌಲಭ್ಯ ಮತ್ತು ಯೋಜನೆಗಳಲ್ಲಿ ಪ್ರಗತಿ ಸಾಧಿಸಬೇಕು. ಮುಖ್ಯವಾಗಿ ಫಲಾನುಭವಿಗಳು ಅರ್ಜಿ ಹಾಕದಿರುವುದು ಎದ್ದು ಕಾಣುತ್ತಿದೆ. ಒಬ್ಬ ಫಲಾನುಭವಿ ಯಾವುದೇ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲು ಬ್ಯಾಂಕ್ ಗೆ ಸಲ್ಲಿಸಬೇಕಾದ ದಾಖಲೆಗಳ ಬಗ್ಗೆ ಮಾಹಿತಿ ಇರುವುದಿಲ್ಲ, ಅಧಿಕಾರಿಗಳೂ ಮಾರ್ಗದರ್ಶನ ನೀಡುವುದಿಲ್ಲ. ಇದರಿಂದ ಅವನು ಯೋಜನೆ ಪಡೆಯುವುದಾದರೂ ಹೇಗೆ? ಹಾಗಾಗಿ ಪೂರಕ ದಾಖಲೆ ಸಲ್ಲಿಸುವ ಕುರಿತು ಅಗತ್ಯ ನಿರ್ದೇಶನ ನೀಡಬೇಕು ಅಥವಾ ಅಧಿಕಾರಿಯು ಬ್ಯಾಂಕ್ ನವರೊಂದಿಗೆ ಸಮನ್ವಯತೆ ಮೂಲಕ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಎಲ್ಲ ಇಲಾಖೆಗಳು ನಿಗಧಿತ ಗುರಿ ಸಾಧಿಸುವ ಮೂಲಕ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.
ಅಲ್ಪಸಂಖ್ಯಾತರಿಗೆ ಸವಲತ್ತುಗಳನ್ನು ತಲುಪಿಸುವ ಕಡೆ ಅಧಿಕಾರಿಗಳು ಗಮನಹರಿಸಬೇಕು. ಪ್ರತಿಯೊಬ್ಬ ನಾಗರಿಕರಿಗೂ ಎಲ್ಲ ಯೋಜನೆಗಳು ಮಾಹಿತಿ ದೊರೆಯುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ನಗರದಲ್ಲಿ ವಕ್ಫ್ ಆಸ್ತಿ ಕಬಳಿಕೆ ಪ್ರಕರಣ ಬೆಳಕಿಗೆ ಬಂದಿದ್ದು, ಈವರೆಗೂ ಕ್ರಮ ಕೈಗೊಂಡಿಲ್ಲ; ಏನು ಮಾಡುತ್ತೀದ್ದೀರಿ, ಈ ಕೂಡಲೇ ಪರಿಶೀಲಿಸಿ ಸಂಬಂಧಿಸಿದ ಎಲ್ಲಾ ಮಾಹಿತಿ ದಾಖಲೆಗಳನ್ನು ಸಲ್ಲಿಸಬೇಕು ಎಂದು ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್ ಅವರು ಜಿಲ್ಲಾ ವಕ್ಫ್ ಕಚೇರಿ ಅಧಿಕಾರಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಮಾತನಾಡಿ, ಅಧಿಕಾರಿಗಳು ತಮ್ಮ ಇಲಾಖೆಗಳ ಯೋಜನೆ, ಸೌಲಭ್ಯ ಮತ್ತು ನಿಗದಿಪಡಿಸಿದ ಭೌತಿಕ-ಆರ್ಥಿಕ ಗುರಿ ಬಗ್ಗೆ ನಿರ್ದಿಷ್ಟ ಹಾಗೂ ಪೂರಕ ಮಾಹಿತಿಯನ್ನು ಸಭೆಗೆ ನೀಡಬೇಕು ಎಂದು ತಿಳಿಸಿದರು
.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಜಿಪಂ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮೆಹಬೂಬ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್