
ನವದೆಹಲಿ, 24 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಅರೆನಗ್ನ ಪ್ರತಿಭಟನೆಗೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಬಂಧನವನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.
ದೆಹಲಿ ಪೊಲೀಸರ ಕ್ರಮದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಬಿಡುಗಡೆಗೊಂಡ ಹೇಳಿಕೆಯಲ್ಲಿ, ಬಂಧನಗಳು ಸಂವಿಧಾನಬಾಹಿರವಾಗಿದ್ದು, ಪ್ರತಿಭಟಿಸುವುದು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು ಎಂದು ಹೇಳಲಾಗಿದೆ. ಜನರ ಪರ ಧ್ವನಿ ಎತ್ತುವುದನ್ನು ಪಕ್ಷ ಮುಂದುವರಿಸಲಿದೆ ಎಂದು ಸ್ಪಷ್ಟಪಡಿಸಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ದೇಶದಲ್ಲಿ ಯುವಕರ ಉದ್ಯೋಗ ಪರಿಸ್ಥಿತಿ ಗಂಭೀರವಾಗಿದೆ ಮತ್ತು ಸಾರ್ವಜನಿಕ ಅಸಮಾಧಾನ ಹೆಚ್ಚುತ್ತಿದೆ ಎಂದು ಹೇಳಿದರು. ಅಮೆರಿಕದೊಂದಿಗಿನ ಒಪ್ಪಂದವು ರೈತರು ಹಾಗೂ ದೇಶದ ಹಿತಾಸಕ್ತಿಗಳಿಗೆ ಹಾನಿ ತಂದಿದೆ ಎಂದು ಆರೋಪಿಸಿದರು. ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕಲು ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಟೀಕಿಸಿದರು. ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ ಎಂದರು.
ಇದೇ ವೇಳೆ, ರಾಹುಲ್ ಗಾಂಧಿ ಎಕ್ಸ್ನಲ್ಲಿ ಪ್ರತಿಕ್ರಿಯಿಸಿ, ಶಾಂತಿಯುತ ಪ್ರತಿಭಟನೆ ಭಾರತೀಯ ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದೆ ಎಂದರು. “ದೇಶದ ಹಿತಕ್ಕಾಗಿ ಪ್ರಧಾನಿಯವರ ವಿರುದ್ಧ ನಿರ್ಭಯವಾಗಿ ಮಾತನಾಡಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಬಗ್ಗೆ ನನಗೆ ಹೆಮ್ಮೆ ಇದೆ” ಎಂದು ತಿಳಿಸಿದ್ದಾರೆ. ಅಧಿಕಾರಕ್ಕೆ ಸತ್ಯ ಹೇಳುವುದು ಅಪರಾಧವಲ್ಲ, ಅದು ದೇಶಭಕ್ತಿ ಎಂದು ಹೇಳಿದ್ದಾರೆ.
ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, ಪ್ರತಿಭಟನೆ ನಡೆಸುವುದು ಕಾನೂನುಬಾಹಿರವಲ್ಲ. ವಿಧಾನ ಉತ್ತಮವಾಗಿರಬಹುದಿತ್ತು, ಆದರೆ ಬಿಜೆಪಿ ಕೂಡ ಇದೇ ರೀತಿಯ ಪ್ರತಿಭಟನೆಗಳನ್ನು ನಡೆಸಿದೆ ಎಂದು ಹೇಳಿದರು. ಈ ಘಟನೆ ಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸುವ ಸರ್ಕಾರದ ಸಾಮರ್ಥ್ಯ ಕುರಿತು ಪ್ರಶ್ನೆಗಳನ್ನು ಎಬ್ಬಿಸಿದೆ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa