
ಧಾರವಾಡ, 24 ಫೆಬ್ರವರಿ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರದ ಆದೇಶದಂತೆ ರಾಜ್ಯದಾದ್ಯಂತ ಉದ್ಯೋಗ ಮೇಳಗಳನ್ನು ಆಯೋಜಿಸಲಾಗುತ್ತಿದ್ದು, ಉದ್ಯೋಗಾವಕಾಶಗಳಿಗಾಗಿ ನಿರೀಕ್ಷೆಯಲ್ಲಿರುವ ಯುವಕರಿಗೆ ವೇದಿಕೆ ಸಿದ್ಧಪಡಿಸಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ ಹೇಳಿದರು.
ಧಾರವಾಡದ ಕರ್ನಾಟಕ ಕಾಲೇಜು (ಕೆಸಿಡಿ) ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಕೌಶಲ್ಯ ಮಿಶನ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಉದ್ಘಾಟಿಸಿ, ಮಾತನಾಡಿದರು.
ಧಾರವಾಡ ಜಿಲ್ಲೆಯ ಉದ್ಯೋಗ ಮೇಳದಲ್ಲಿ ನಿರುದ್ಯೋಗ ಮತ್ತು ಆಸಕ್ತ ಯುವಕ, ಯುವತಿಯರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗುತ್ತದೆ. ಉದ್ಯೋಗಕ್ಕೆ ಹಾಜರಾದ ಅಭ್ಯರ್ಥಿಗಳಿಂದ ಪೀಡ್ ಬ್ಯಾಕ್ ಪಡೆಯಲಾಗುತ್ತದೆ. ಈ ಕುರಿತು ಕ್ರಮ ವಹಿಸಲು ಕೌಶಲ್ಯಾಭಿವೃದ್ಧಿ ಇಲಾಖೆಗೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು.
ಸರ್ಕಾರ ಯುವಜನತೆಗೆ ಉದ್ಯೋಗಾವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಬದ್ಧವಾಗಿದ್ದು, ಈಗಾಗಲೇ 40,000ಕ್ಕೂ ಹೆಚ್ಚು ಉದ್ಯೋಗಗಳನ್ನು ನೀಡಲಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ನೇರವಾಗಿ ಉದ್ಯೋಗದಾತರನ್ನು ಭೇಟಿ ಮಾಡುವ ಅವಕಾಶ ಕಲ್ಪಿಸುವುದು ಉದ್ಯೋಗ ಮೇಳಗಳ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಸರ್ಕಾರವು ಮತ್ತೊಂದು ಮಹತ್ವದ ನಿರ್ಣಯ ಕೈಗೊಂಡಿದ್ದು, 56,000 ಹೊಸ ಹುದ್ದೆಗಳ ನೇಮಕಾತಿಗೆ ತೀರ್ಮಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯನ್ನು ಬಜೆಟ್ನಲ್ಲಿ ತೆಗೆದುಕೊಂಡು ನಿರ್ಣಯ ಮಾಡಿದ್ದಾರೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಕಡಿಮೆ ಮಾಡಲು ಸರ್ಕಾರ ನಿರಂತರ ಪ್ರಯತ್ನಿಸುತ್ತಿದ್ದು, ಯುವಕರು ಈ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಚಿವ ಸಂತೋಷ ಲಾಡ್ ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಸೇರಿದಂತೆ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa