
ಶಿವಮೊಗ್ಗ, 25 ಫೆಬ್ರವರಿ (ಹಿ.ಸ.):
ಆ್ಯಂಕರ್:
ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್17ರವರೆಗೆ ಜಿಲ್ಲೆಯ 41 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 19,009 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಇವರಲ್ಲಿ 17,755 ನಿಯಮಿತ, 871 ಪುನರಾವರ್ತಿತ, 380 ಖಾಸಗಿ ಹಾಗೂ 3 ಫಲಿತಾಂಶ ಸುಧಾರಣೆ ಅಭ್ಯರ್ಥಿಗಳಿದ್ದಾರೆ. ಪರೀಕ್ಷೆ ಸುಗಮವಾಗಿ ನಡೆಯಲು 12 ತಂಡಗಳನ್ನು ರಚಿಸಿ, ಪೊಲೀಸ್ ಭದ್ರತೆ ಒದಗಿಸಲಾಗಿದೆ. ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ಭಾರತೀಯ ನ್ಯಾಯಸಂಹಿತೆ 163ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗಿದ್ದು, ಪ್ರವೇಶಪತ್ರ ತೋರಿಸಿ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶವಿದೆ. ವಿದ್ಯುತ್ ವ್ಯತ್ಯಯವಾಗದಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ವಿದ್ಯಾರ್ಥಿಗಳು ಆತಂಕವಿಲ್ಲದೆ ಪರೀಕ್ಷೆ ಬರೆಯುವಂತೆ ಕರೆ ನೀಡಿದ ಜಿಲ್ಲಾಧಿಕಾರಿಗಳು, ಪ್ರಶ್ನೆಪತ್ರಿಕೆ ಸೋರಿಕೆ ಕುರಿತ ವದಂತಿಗಳಿಗೆ ನಂಬಿಕೆ ಇಡಬಾರದು ಎಂದು ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಸಿಇಒ ಎನ್.ಹೇಮಂತ್ ವಿಶೇಷ ತರಗತಿಗಳ ಮೂಲಕ ವಿದ್ಯಾರ್ಥಿಗಳಿಗೆ ಸಹಾಯ ನೀಡಲಾಗಿದೆ ಎಂದು ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa