
ಶಿವಮೊಗ್ಗ, 26 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಭೋವಿ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಜಾರಿಗೊಳಿಸಲಾಗಿರುವ ಸರ್ಕಾರದ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವಂತೆ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ರಾಮಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಮುದಾಯದ ಅರ್ಹರಿಗೆ ಸೌಲಭ್ಯ ತಲುಪಿಸುವಲ್ಲಿ ನಿರ್ಲಕ್ಷ್ಯ ವಹಿಸುವುದನ್ನು ಸಹಿಸಲಾಗುವುದಿಲ್ಲ ಎಂದರು. ಭೋವಿ ಜನಾಂಗದ ಅಭಿವೃದ್ಧಿಗೆ ಪ್ರಸಕ್ತ ಬಜೆಟ್ನಲ್ಲಿ 300 ಕೋಟಿ ರೂ. ಮೀಸಲಿಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಕಳೆದ ಬಜೆಟ್ನಲ್ಲಿ ಮೀಸಲಾದ 90 ಕೋಟಿ ರೂ. ಸಮರ್ಪಕವಾಗಿ ಬಳಸಲಾಗಿದೆ ಎಂದು ತಿಳಿಸಿದರು.
ಜಮೀನು ಸಂಬಂಧಿತ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಕಂದಾಯ ಸಚಿವರು ಹಾಗೂ ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಶೀಘ್ರದಲ್ಲಿ ಪರಿಹಾರ ಸಿಗುವ ವಿಶ್ವಾಸವಿದೆ ಎಂದರು. ಪಂಚ ಗ್ಯಾರಂಟಿ ಸೇರಿದಂತೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಲು ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.
ಸಾಲ-ಸೌಲಭ್ಯ ವಿತರಣೆಯಲ್ಲಿ ಬ್ಯಾಂಕುಗಳು ಅನಗತ್ಯ ವಿಳಂಬ ಮಾಡುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಮಾನವೀಯ ನೆಲೆಯಲ್ಲಿ ನಿಯಮಗಳಲ್ಲಿ ಅಲ್ಪ ಸಡಿಲಿಕೆ ನೀಡಿ ಸೌಲಭ್ಯ ಒದಗಿಸಲು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್. ಹೇಮಂತ್ ಬ್ಯಾಂಕುಗಳ ಶಾಖಾ ವ್ಯವಸ್ಥಾಪಕರಿಗೆ ವಿಳಂಬ ತಪ್ಪಿಸಲು ಸೂಚನೆ ನೀಡುವುದಾಗಿ ಹೇಳಿದರು. ಎನ್ಆರ್ಎಲ್ಎಂ ಯೋಜನೆಯಡಿ ರಚಿಸಲಾದ 12,500 ಸ್ವಸಹಾಯ ಗುಂಪುಗಳಿಗೆ ಮಾರ್ಚ್ ಅಂತ್ಯದೊಳಗೆ ಸಹಾಯಧನ ಹಾಗೂ ಸಾಲ ಸೌಲಭ್ಯ ವಿತರಿಸುವ ಕ್ರಮ ಕೈಗೊಳ್ಳಲಾಗುವುದು ಎಂದರು.
ನಿಗಮದ ವ್ಯವಸ್ಥಾಪಕ ನಿರ್ದೇಶಕ ಚಂದ್ರಾನಾಯ್ಕ್ ನಿಗಮದ ವಿವಿಧ ಸ್ವಯಂ ಉದ್ಯೋಗ ಹಾಗೂ ಆರ್ಥಿಕ ಅಭಿವೃದ್ಧಿ ಯೋಜನೆಗಳ ಸದುಪಯೋಗ ಪಡೆಯುವಂತೆ ಮನವಿ ಮಾಡಿದರು. ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa