
ಬೆಂಗಳೂರು, 27 ಫೆಬ್ರವರಿ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ಎಚ್ಚರಿಕಾ ಕ್ರಮ ಕೈಗೊಂಡಿದೆ. ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಅವು ಮಾರ್ಚ್ 17ರವರೆಗೆ ನಡೆಯಲಿವೆ. ಬಳಿಕ ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ.
ಈ ಪ್ರಮುಖ ಪರೀಕ್ಷೆಗಳು ನಿಷ್ಪಕ್ಷಪಾತವಾಗಿ ಹಾಗೂ ಸುರಕ್ಷಿತವಾಗಿ ನಡೆಯುವಂತೆ ರಾಜ್ಯದಾದ್ಯಂತ ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕಠಿಣ ಕ್ರಮ ಜರುಗಿಸಲಾಗಿದ್ದು, ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ಈಗಾಗಲೇ ನಿಗಾ ಇಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ವಿದ್ಯಾರ್ಥಿಗಳು ಆತಂಕವಿಲ್ಲದೆ ಪರೀಕ್ಷೆ ಬರೆಯುವಂತೆ ಅಗತ್ಯ ಭದ್ರತೆ ಒದಗಿಸಲಾಗಿದೆ. ಯಾವುದೇ ಅಡ್ಡಿ, ಗೊಂದಲ ಅಥವಾ ಗಲಾಟೆಗಳಿಗೆ ಅವಕಾಶ ನೀಡದಂತೆ ಕಟ್ಟುನಿಟ್ಟಿನ ವ್ಯವಸ್ಥೆ ಮಾಡಲಾಗಿದೆ.
ಇತ್ತೀಚಿನ ವರ್ಷಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಸುಳ್ಳು ಸುದ್ದಿಗಳನ್ನು ಹಂಚುತ್ತಿದ್ದ ವಿವಿಧ ಸಾಮಾಜಿಕ ಮಾಧ್ಯಮಗಳ ಮೇಲೂ ಕಣ್ಣಿಡಲಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರನ್ನು ದಿಕ್ಕುತಪ್ಪಿಸುವ ಮಾಹಿತಿಯನ್ನು ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 163 ಜಾರಿಗೊಳಿಸಲಾಗಿದ್ದು, ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜನರು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಸಜ್ಜಾಗಿದೆ.
ಸುಳ್ಳು ಸುದ್ದಿಗಳನ್ನು ನಂಬಬಾರದು. ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಸಂದೇಶಗಳು ಬಂದರೆ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa