
ಹಾವೇರಿ, 28 ಫೆಬ್ರವರಿ (ಹಿ.ಸ.):
ಆ್ಯಂಕರ್:ಹಾವೇರಿ ಜಿಲ್ಲೆಯ ಹಾನಗಲ್ ನಗರದ ದರ್ಗಾ ಓಣಿಯ ಖಬರಸ್ಥಾನದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ₹7 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಚಾಲನೆ ನೀಡಿದರು.
ಖಬರಸ್ಥಾನದಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಪರಿಸರ ಸುಧಾರಣೆ ಹಾಗೂ ಅಗತ್ಯ ಸೌಲಭ್ಯಗಳ ಕಲ್ಪನೆಗಾಗಿ ಈ ಅನುದಾನವನ್ನು ಮೀಸಲಿರಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ದರ್ಗಾ ಓಣಿಯ ನಿವಾಸಿಗಳೊಂದಿಗೆ ಕೆಲಕಾಲ ಮಾತುಕತೆ ನಡೆಸಿದ ಶಾಸಕ ಶ್ರೀನಿವಾಸ ಮಾನೆ, ಸ್ಥಳೀಯರ ಕುಂದು-ಕೊರತೆಗಳನ್ನು ಆಲಿಸಿದರು. ನೀರು, ರಸ್ತೆ, ಸ್ವಚ್ಛತೆ ಸೇರಿದಂತೆ ಸಾರ್ವಜನಿಕ ಸಮಸ್ಯೆಗಳ ಕುರಿತು ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದು ತಕ್ಷಣ ಕ್ರಮ ಕೈಗೊಳ್ಳುವಂತೆ ದೂರವಾಣಿ ಮೂಲಕ ಸೂಚಿಸಿದರು.
ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದ ಅವರು, ಅಭಿವೃದ್ಧಿ ಕಾರ್ಯಗಳಲ್ಲಿ ನಾಗರಿಕರ ಸಹಕಾರವೂ ಅಗತ್ಯವೆಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa