ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
ನಾನಾ
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ


ಬೆಂಗಳೂರು, 28 ಫೆಬ್ರವರಿ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿವೆ. ಮಾ.17ರವರೆಗೆ ನಡೆಯಲಿರುವ ಈ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ರಾಜ್ಯದ ನಾನಾ ಭಾಗಗಳಲ್ಲಿ 1,217 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಸುಸೂತ್ರ ಹಾಗೂ ಪಾರದರ್ಶಕ ಪರೀಕ್ಷಾ ವ್ಯವಸ್ಥೆಗೆ ಇಲಾಖೆ ವ್ಯಾಪಕ ಪೂರ್ವಸಿದ್ಧತೆ ಮಾಡಿಕೊಂಡಿದೆ.

ಮೊದಲ ದಿನವಾದ ಇಂದು ಕನ್ನಡ ಹಾಗೂ ಅರೇಬಿಕ್ ವಿಷಯಗಳ ಪರೀಕ್ಷೆಗಳು ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿವೆ.

ಪರೀಕ್ಷೆ ನಡೆಯುವ ಅವಧಿಯಲ್ಲಿ ಎಲ್ಲಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳು, ಸೈಬರ್ ಸೆಂಟರ್ಗಳು ಹಾಗೂ ಕಂಪ್ಯೂಟರ್ ಅಂಗಡಿಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಹಿಂದಿನ ಪರೀಕ್ಷೆಗಳಲ್ಲಿ ಅಕ್ರಮಗಳಲ್ಲಿ ಭಾಗಿಯಾಗಿದ್ದವರ ಮೇಲೆ ಪೊಲೀಸ್ ಇಲಾಖೆ ವಿಶೇಷ ನಿಗಾ ವಹಿಸಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಸಂಪೂರ್ಣ ಪರೀಕ್ಷಾ ಪ್ರಕ್ರಿಯೆಯನ್ನು ವೆಬ್ ಕ್ಯಾಸ್ಟಿಂಗ್ ಮೂಲಕ ಮಾನಿಟರ್ ಮಾಡುವ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧೀಕ್ಷಕರು ನೇರ ಮೇಲ್ವಿಚಾರಣೆ ವಹಿಸಲಿದ್ದಾರೆ.

ಪ್ರಶ್ನೆ ಪತ್ರಿಕೆಗಳನ್ನು ಖಜಾನೆಯಿಂದ ಕೇಂದ್ರಗಳಿಗೆ ಕಳುಹಿಸುವ ಸಂದರ್ಭದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ರವಾನೆ ಪ್ರಕ್ರಿಯೆಯ ವಿಡಿಯೋ ಚಿತ್ರೀಕರಣಕ್ಕೂ ವ್ಯವಸ್ಥೆ ಕಲ್ಪಿಸಲಾಗಿದೆ. ನಿಗದಿತ ಸಮಯಕ್ಕಿಂತ ಮೊದಲು ಪ್ರಶ್ನೆ ಪತ್ರಿಕೆ ತೆರೆದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಇಲಾಖೆ ಎಚ್ಚರಿಕೆ ನೀಡಿದೆ.

ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಮೊಬೈಲ್ ಫೋನ್ ಸೇರಿದಂತೆ ಎಲ್ಲಾ ಎಲೆಕ್ಟ್ರಾನಿಕ್ ಉಪಕರಣಗಳ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ. ಪ್ರತಿ ಕೇಂದ್ರದಲ್ಲೂ ಸಿಟ್ಟಿಂಗ್ ಸ್ಕ್ವಾಡ್ ಹಾಗೂ ಫ್ಲೈಯಿಂಗ್ ಸ್ಕ್ವಾಡ್ ನಿಯೋಜಿಸಲಾಗಿದ್ದು, ಪೊಲೀಸ್ ಭದ್ರತೆ ಕಟ್ಟು ನಿಟ್ಟಾಗಿ ಜಾರಿಯಲ್ಲಿರಲಿದೆ.

ಅಕ್ರಮ, ಗೊಂದಲಗಳಿಗೆ ಅವಕಾಶ ನೀಡದೇ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಎಲ್ಲಾ ರೀತಿಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande