
ಹಾವೇರಿ, 01 ಮಾರ್ಚ್ (ಹಿ.ಸ.):
ಆ್ಯಂಕರ್:
ಅಮೆರಿಕಾ–ಇರಾನ್ ನಡುವಿನ ಯುದ್ಧದ ಪರಿಣಾಮವಾಗಿ ದುಬೈ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ರಾಜ್ಯ ಸರ್ಕಾರ ತಕ್ಷಣವೇ ಸುರಕ್ಷಿತವಾಗಿ ವಾಪಸ್ ಕರೆತರುವ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಆತಂಕಕಾರಿ ಆಗಿದ್ದು, ದೋಹಾ, ದುಬೈ, ಕುವೈತ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಕನ್ನಡಿಗರು ಸಂಕಷ್ಟದಲ್ಲಿದ್ದಾರೆ ಎಂದರು. ಕೆಲವರಿಗೆ ಹಣ ಹಾಗೂ ಆಹಾರದ ತೊಂದರೆ ಉಂಟಾಗಿದೆ ಎಂಬ ಮಾಹಿತಿ ಬಂದಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ ದುಬೈನಲ್ಲಿರುವ ಕನ್ನಡಿಗರ ಸಂಘಟನೆಗಳು ಹಾಗೂ ಭಾರತೀಯ ರಾಯಭಾರಿ ಕಚೇರಿಗಳೊಂದಿಗೆ ಸಂಪರ್ಕಿಸಿ ತಾತ್ಕಾಲಿಕವಾಗಿ ಊಟ-ವಸತಿ ವ್ಯವಸ್ಥೆ ಕಲ್ಪಿಸಬೇಕು. ಕೇಂದ್ರ ಸರ್ಕಾರದೊಂದಿಗೆ ಸಮನ್ವಯ ಸಾಧಿಸಿ ವಿಶೇಷ ವಿಮಾನಗಳ ಮೂಲಕ ಕನ್ನಡಿಗರನ್ನು ತಾಯಿ ನಾಡಿಗೆ ಕರೆತರುವ ಕಾರ್ಯ ತ್ವರಿತಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
ಹಿಂದೆ ಸಿರಿಯಾ ಮತ್ತು ಇರಾಕ್ ಯುದ್ಧದ ಸಂದರ್ಭದಲ್ಲೂ ಭಾರತ ಸರ್ಕಾರ ಭಾರತೀಯರನ್ನು ಸುರಕ್ಷಿತವಾಗಿ ಕರೆತಂದ ಉದಾಹರಣೆ ಇದೆ ಎಂದು ಉಲ್ಲೇಖಿಸಿದ ಅವರು, ಈ ಸಂದರ್ಭದಲ್ಲೂ ಕೇಂದ್ರ-ರಾಜ್ಯ ಸರ್ಕಾರಗಳು ಕೈಜೋಡಿಸಿ ಕಾರ್ಯನಿರ್ವಹಿಸಬೇಕು ಎಂದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa