
ಶಿವಮೊಗ್ಗ, 01 ಮಾರ್ಚ್ (ಹಿ.ಸ.):
ಆ್ಯಂಕರ್:ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶಿವಮೊಗ್ಗದ ವಿಮಾನ ನಿಲ್ದಾಣ ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ವಾಪಸ್ಸು ಕರೆತರಲಾಗುವುದು ಎಂದು ಹೇಳಿದರಲ್ಲದೆ ದುಬೈ ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದರು.
ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗುವುದು. ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ದುಬೈದಲ್ಲಿದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ ಹೋಟೆಲಿನಲ್ಲಿ ಸುರಕ್ಷಿತವಾಗಿರುವುದಾಗಿ ಹೇಳಿದರು ಎಂದರು.
ಅಮೆರಿಕಾ ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುವುದಾಗಿ ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa